

ಮಡಿಕೇರಿ: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮನವಿ ಮಾಡಿದರು.
ಆ೩೧ ರಂದು ನಡೆಯಲಿರುವ ಗೌರಿ-ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ಸೋಮವಾರ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಇಕೋ ಕ್ಲಬ್ ಆಶ್ರಯದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಜನಜಾಗೃತಿ ಅಭಿಯಾನ-೨೦೨೨ ದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ನೀರು ಮತ್ತು ಪರಿಸರ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸುವ ಜನಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗೆ ಸಹಕರಿಸಬೇಕು. ಗಣೇಶ ಮೂರ್ತಿಗಳನ್ನು ಆಕಷರ್ಣೀಯವಾಗಿಸಲು ಅರಿಶಿನ ಮತ್ತು ನೈಸರ್ಗಿಕ ಬಣ್ಣಗಳನ್ನು ಬಳಸಬಹುದು ಎಂದು ಹೇಳಿದರು.
ಗಣೇಶೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಗರದ ರೋಟರಿ ಮಿಸ್ಟಿ ಹಿಲ್ಸ್‌ನ ಅಧ್ಯಕ್ಷ ಪ್ರಸಾದ್ ಗೌಡ ಮಾತನಾಡಿ, ಮಾಲಿನ್ಯ ಮುಕ್ತ ಗಣೇಶ ಹಬ್ಬ ಆಚರಣೆಗೆ ಎಲ್ಲರೂ ಪಣತೊಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಪಿ.ಕೆ.ನಳಿನಿ ಮಾತನಾಡಿ, ಗಣೇಶೋತ್ಸವವು ನಾಡಿನ ಸಂಸ್ಕೃತಿ ಹಾಗೂ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು.
ಅಭಿಯಾನದಲ್ಲಿ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಡಿಡಿಪಿಐ ವೇದಮೂರ್ತಿ, ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಐ.ಜೆ.ಜನೆಟ್, ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಇಕೋ ಕ್ಲಬ್‌ನ ಶಿಕ್ಷಕಿ ಐ.ಜೆ. ಜನೆಟ್, ಎನ್‌ಸಿಸಿ ಅಧಿಕಾರಿ ಎಂ.ಎಸ್ ಚಂದ್ರಿಕಾ, ಪರಿಸರ ಕಾರ್ಯಕರ್ತ ಸಾಗರ್ ತೊರೆನೂರು ಇತರರಿದ್ದರು.
ವಿದ್ಯಾರ್ಥಿನಿ ಮಮತ ಕಾಳು ಮಿಶ್ರಣದೊಂದಿಗೆ ಜೇಡಿಮಣ್ಣಿನಿಂದ ತಯಾರಿಸಿದ್ದ ಗಣೇಶ ಮೂರ್ತಿ ಗಮನ ಸೆಳೆಯಿತು. ವಿದ್ಯಾರ್ಥಿಗಳು ಅರಿಶಿಣ ಮತ್ತು ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪ್ರೇಕ್ಷಕರ ಗಮನ ಸೆಳೆದವು.