ವಿಶ್ವಕರ್ಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

New Pm New
Published on

ಹುಬ್ಬಳ್ಳಿ : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯಲ್ಲಿ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜು. 27ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಗೋಕುಲ ರಸ್ತೆಯ ಶಾಂಭವಿ ಹಾಲ್​ನಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ ಬಡಿಗೇರ, ನೋಂದಣಿ ಮಾಡಿಸಿದ ಜಿಲ್ಲೆಯ ಎಲ್ಲ ವಿಶ್ವಕರ್ಮ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ವಿಶ್ವಕರ್ಮ ಸಮಾಜದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಹಿಂದುಳಿದ ವರ್ಗಗಳ ಜನರು ಅವಕಾಶದಿಂದ ವಂಚಿತರಾಗಿದ್ದಾರೆ. ಆದಕಾರಣ, ಮೀಸಲಾತಿ ನೀಡಿ ಸಮಾಜದ ವಿದ್ಯಾರ್ಥಿಗಳಿಗೆ ಸೌಲಭ್ಯ ದೊರೆಯುವಂತೆ ಮಾಡಬೇಕು. ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪಿ. ನಂಜುಂಡಿ, ಸಮಾಜದ ಸ್ವಾಮೀಜಿಗಳು, ರಾಜ್ಯದ ವಿವಿಧ ಜಿಲ್ಲೆಯ ಅಧ್ಯಕ್ಷರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಡಿಗೇರ, ಮಾಜಿ ಮೇಯರ್ ರಾಮಣ್ಣ ಬಡಿಗೇರ, ರವಿ ಕಮ್ಮಾರ, ನಾರಾಯಣ ಬಡಿಗೇರ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net