

ಹಲಗೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ತೇರ್ಗಡೆಯಾಗುತ್ತಿದ್ದಾರೆ. ಪಟ್ಟಣದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವವರು ಯಾವುದರಲ್ಲೂ ಕಡಿಮೆ ಇಲ್ಲ ಎಂದು ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ ತಿಳಿಸಿದರು.
ಸಮೀಪದ ಬುಯ್ಯನದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ. ನಾನು ಕೂಡ ಸರ್ಕಾರಿ ಶಾಲೆಯಲ್ಲಿಯೇ ಓದಿ, ಈ ಸ್ಥಾನಕ್ಕೆ ಬಂದಿದ್ದೇನೆ. ತಂದೆ, ತಾಯಿ, ಗುರುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ ಎಂದು ಸಲಹೆ ನೀಡಿದರು.
ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಾಲೆಯ ಶಿಕ್ಷಕರು ಶ್ರಮಿಸುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುತ್ತಿದ್ದಾರೆ. ಇಲ್ಲಿ ಪಾಲಕರು ಮತ್ತು ಎಸ್‌ಡಿಎಂಸಿ ಸಹಕಾರ ಉತ್ತಮವಾಗಿದೆ. ಶಾಲೆಗೆ ಗ್ರಾಮಸ್ಥರ ಸಹಕಾರ ಇದೇ ರೀತಿ ಮುಂದುವರಿಯಲಿ ಎಂದರು.
ಎಸ್‌ಎಸ್‌ಎಲ್‌ಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ್ ಸ್ವಾಮಿ, ಮುಖಂಡ ಕೃಷ್ಣೇಗೌಡ, ಗ್ರಾಪಂ ಸದಸ್ಯರಾದ ಕೆಂಚೇಗೌಡ, ಉಪಾಧ್ಯಕ್ಷರಾದ ರಂಜಿತಾ ಪ್ರಕಾಶ್, ನಾಚೇಗೌಡ, ಸಂಪನ್ಮೂಲ ವ್ಯಕ್ತಿ ಕೃಷ್ಣ ಜಿ.ಎಸ್., ಮುಖ್ಯ ಶಿಕ್ಷಕ ವಿಷಕಂಠೇಗೌಡ, ರಾಘವೇಂದ್ರ, ಸೋಮಣ್ಣ, ಹೇಮಂತ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಹದೇವ ಪ್ರಸಾದ್, ಈಶ್ವರ, ಕೆ.ಎಲ್.ದೇವರಾಜು, ರಾಜು, ಪುಟ್ಟರಾಜು ಇತರರು ಇದ್ದರು.