ತಾಲೂಕು ಕಚೇರಿಗೆ ಮುತ್ತಿಗೆ ಇಂದು

Published on

ಗುಂಡ್ಲುಪೇಟೆ: ರೈತರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಸಲುವಾಗಿ ಸಾಮೂಹಿಕ ನಾಯಕತ್ವದ ರೈತ ಸಂಘಟನೆ ಸೆ 16ರ ಮಂಗಳವಾರದಿಂದ ಪಟ್ಟಣದ ತಾಲೂಕು ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮನವಿ ಮಾಡಿದ್ದಾರೆ.

ಅರಣ್ಯ ಇಲಾಖೆ ಕಾಡಂಚಿನ ರೈತರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲು ಜನರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಂದಾಯ ಇಲಾಖೆಯು ಆರ್‌ಟಿಸಿ, ಪಹಣಿ ನೀಡುವಲ್ಲಿ ವಿಳಂಬ, ಜಮೀನು ದಾಖಲೆಗಳು ಮತ್ತು ಸರ್ವೇ ನಂಬರ್‌ಗಳಲ್ಲಿ ತಪ್ಪುಗಳು, ಉಪ-ನೋಂದಣಾಧಿಕಾರಿ ಕಚೇರಿಯಲ್ಲಿ ಹೆಚ್ಚು ಸಮಯ ಕಾಯುವುದು, ಲಂಚ, ಅನಧಿಕೃತ ಶುಲ್ಕ ಬೇಡಿಕೆ, ವೃದ್ಧಾಪ್ಯ, ವಿಧವಾ, ಅಂಗವಿಕಲ ಪಿಂಚಣಿ ಮಂಜೂರಾತಿ ಪತ್ರ, ಜಾತಿ, ಆದಾಯ, ನಿವಾಸ, ಜನನ-ಮರಣ ಪ್ರಮಾಣಪತ್ರ ನೀಡುವಲ್ಲಿ ವಿಳಂಬ, ಬೆಳೆ ವಿಮೆ ಪರಿಹಾರದಲ್ಲಿ ವಿಳಂಬ, ಕಾಡು ಪ್ರಾಣಿಗಳ ದಾಳಿಯಿಂದ ಬೆಳೆ ನಾಶದಿಂದ ಸಮಸ್ಯೆಗಳ ಸುಳಿಗೆ ಸಿಲುಕಿದ ರೈತಾಪಿ ವರ್ಗ ಹೈರಾಣಾಗಿದ್ದರೂ ಅಧಿಕಾರಿಗಳು ಮಾತ್ರ ಯಾವುದೇ ಸಮಸ್ಯೆಗಳಿಗೆ ಪರಿಹಾರ ಕೊಡುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಸಂಘಟನೆಯು ಸೆ. 16 ರಂದು ಪಟ್ಟಣದಲ್ಲಿ ಬೃಹತ್ ಟ್ರ್ಯಾಕ್ಟರ್ ರ‌್ಯಾಲಿ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಜ್ವಲಂತ ಸಮಸ್ಯೆಗೆ ಪರಿಹಾರ ನೀಡುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ. ಆದ್ದರಿಂದ ಎಲ್ಲ ಗ್ರಾಮಗಳ ರೈತರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net