ಬಳ್ಳಾರಿ : ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಪತ್ತೆಗೆ ಕಾರ್ಯಪಡೆ ರಚಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.
ನಗರದ ಎಸ್ಪಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗ್ರಾಪಂ ಮಟ್ಟದಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಭೆ ಹಮ್ಮಿಕೊಂಡು ಆ ಸಭೆಯಲ್ಲಿ ಕಾಣೆಯಾದ ಮಕ್ಕಳ ಕುರಿತು ಮಾಹಿತಿ ನೀಡಬೇಕು ಎಂದರು.
ಎಎಸ್ಪಿ ನವೀನ್‌ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ ಕಾಣೆಯಾದ ಮಕ್ಕಳ ಕುರಿತು ಪತ್ತೆ ಹಚ್ಚಲು ಕ್ರಮವಹಿಸಬೇಕು. ಈ ಕುರಿತು ಇಲಾಖೆಯಿಂದ ತೆರೆದ ಮನೆ ಕಾರ್ಯಕ್ರಮವನ್ನು ಶಾಲಾ - ಕಾಲೇಜುಗಳಲ್ಲಿ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬಳಿಕ ಮಕ್ಕಳ ಸಹಾಯವಾಣಿಯ ವಿನ್ಯಾಸಗೊಂಡ ನೂತನ ಲೋಗೋ ಹೊಂದಿರುವ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.