ವೃಂದ, ನೇಮಕಾತಿ ನಿಯಮಕ್ಕೆ ತಿದ್ದುಪಡಿ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

Teacher Representative Conference Mandya
Published on

ಮಂಡ್ಯ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ(ಸಿ ಆ್ಯಂಡ್ ಆರ್) ನಿಯಮಕ್ಕೆ ತಿದ್ದುಪಡಿ ಮಾಡಲು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಮುಂದಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ನಗರದ ಗುರುಭವನದಲ್ಲಿ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಶಿಕ್ಷಕ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅದರಂತೆ ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದರು.

ಸರ್ಕಾರವು ಯಾವುದೇ ನಿರ್ಣಯವನ್ನಾದರೂ ಕಾನೂನು ಇಲಾಖೆ ಹಾಗೂ ಸಂವಿಧಾನದ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬೇಕು. ಸಂವಿಧಾನ ಮೀರಿ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಬೇಡಿಕೆಗಳ ಈಡೇರಿಕೆಗಾಗಿ ತಾಳ್ಮೆಯಿಂದ ವರ್ತಿಸಿ. ಕರ್ನಾಟಕದ ಏಳು ಕೋಟಿ ಕನ್ನಡಿಗರ ಸಮಸ್ಯೆಯನ್ನು ಆಲಿಸುವಲ್ಲಿ ರಾಜ್ಯ ಸರ್ಕಾರ ಎಂದಿಗೂ ಮುಂದೆ ಇರುತ್ತದೆ. ಆದ್ದರಿಂದ ಹೋರಾಟ ಒಂದೇ ಪರಿಹಾರವಲ್ಲ. ಸರ್ಕಾರ ಏಳು ಕೋಟಿ ಕನ್ನಡಿಗರ ಪರವಾಗಿದೆ ಎಂದು ಶಿಕ್ಷಕರ ಸಮಸ್ಯೆ ಪರಿಹರಿಸುವಲ್ಲಿ ಭರವಸೆಯ ಮಾತುಗಳನ್ನು ಹೇಳಿದ ಸಚಿವರು, ಪಾಲಕರು ಖಾಸಗಿ ಶಾಲೆಗಳ ಮೊರೆ ಹೋಗದೆ ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ ಸಲುವಾಗಿ ಸರ್ಕಾರಿ ಶಾಲಾ ಶಿಕ್ಷಕರು ಜವಾಬ್ದಾರಿಯುತ, ಆಕರ್ಷಕ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಇತರರಿದ್ದರು. ಇದೇ ವೇಳೆ 2024 ಮತ್ತು 2025ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಧ್ರುತಿ, ಪುನೀತ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚಿನ ಅಂಕ ಗಳಿಸಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಚೇತನ್ ಅವರನ್ನು ಸನ್ಮಾನಿಸಲಾಯಿತು. ನೂತನವಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಹಾಗೂ ಕಾರ್ಯದರ್ಶಿ ಚೇತನ್ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net