

ಯಲಹಂಕ: ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುವ ನಿರ್ಮಾತೃಗಳು, ಉತ್ತಮ ಗುರುವಿನ ಸಾಮಿಪ್ಯ ಮತ್ತು ಸಾನ್ನಿಧ್ಯವು ಶಿಷ್ಯನನ್ನು ಶ್ರೇಷ್ಠ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಂ. ಉತ್ತರ ವಲಯ- 4 ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಯಲಹಂಕ ಉಪನಗರದ ಖಾಸಗಿ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಆಯೋಜಿಸಿದ್ದ 2025ನೇ ಸಾಲಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ಮಹತ್ತರವಾದ ಪಾತ್ರ ವಹಿಸುತ್ತಾರೆ. ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ, ಶಿಸ್ತು, ಸಂಯಮ, ಮಾನವೀಯ ಮೌಲ್ಯಗಳು, ದೇಶಭಕ್ತಿಯಂತಹ ಸಕಾರಾತ್ಮಕ ಮೌಲ್ಯಗಳನ್ನು ಬೋಧಿಸಿದರೆ ಆ ಮಕ್ಕಳು ಸತ್ಪ್ರಜೆಗಳಾಗಿ ರೂಪುಗೊಂಡು, ಸಮಾಜದ ಆಸ್ತಿಯಾಗುತ್ತಾರೆ. ಈ ತೆರನಾದ ಶಿಕ್ಷಣ ಬೋಧಿಸದಿದ್ದರೆ ಅದೇ ಮಕ್ಕಳು ಸಮಾಜಕ್ಕೆ ಹೊರೆಯಾಗುತ್ತಾರೆ. ಆದ್ದರಿಂದ ಶಿಕ್ಷಕರು ಮಕ್ಕಳ ಭವಿಷ್ಯದ ಶಿಲ್ಪಿಗಳಿದ್ದಂತೆ. ಯಲಹಂಕ ಕ್ಷೇತ್ರದ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ರಾಜ್ಯದಲ್ಲಿ ಹೆಗ್ಗಳಿಕೆ ಪಡೆಯುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ ಎಂದು ಹೇಳಿದ ವಿಶ್ವನಾಥ್ ಶಿಕ್ಷಕರ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿಗೂ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಶಿಕ್ಷಕರು ಮತ್ತು ಪ್ರಸಕ್ತ ಸಾಲಿನಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶೈಲ ಆರ್.ಎನ್., ಬಿ.ಆರ್.ಸಿ. ಪ್ರಕಾಶ್ ಬಿ.ಕೆ., ಶಿಕ್ಷಕರ ಸಂಘದ ಬೆಂ.ಉತ್ತರ ಜಿಲ್ಲಾಧ್ಯಕ್ಷ ಕೆ.ಎಸ್.ಗಿರೀಶ್, ಎಸ್.ಸಿ., ಎಸ್.ಟಿ. ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಭದ್ರಾನಾಯಕ್ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.