

ಮಂಗಳೂರು: ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಶೀನ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ಸ್ವತಃ ಶಿಕ್ಷಕರಾಗಿದ್ದ ಡಾ.ಎಸ್.ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನದ ಸಂಭ್ರಮದ ಬದಲು, ಶಿಕ್ಷಕರ ದಿನವಾಗಿ ಆಚರಿಸುವಂತೆ ಕರೆ ನೀಡಿ, ಶಿಕ್ಷಕರ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು.
ನಿವೃತ್ತ ಪ್ರಾಧ್ಯಾಪಕ, ಡಾ.ಶಿಕಾರಿಪುರ ಕೃಷ್ಣಮೂರ್ತಿ, ಮಕ್ಕಳಿಗೆ ಪುಸ್ತಕದ ಹುಚ್ಚು ಹಿಡಿಸಿ, ಅಂಕದ ಹುಚ್ಚು ಬಿಡಿಸಿ, ಕೇವಲ ಅಂಕ ಗಳಿಕೆ ಬುದ್ಧಿವಂತಿಕೆಯ ಮಾನದಂಡವಲ್ಲ, ಬದಲಿಗೆ ಅವರ ಕ್ರಿಯಾಶೀಲತೆಯನ್ನು, ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಲಿಸಿ, ಸ್ವತಃ ಶಿಕ್ಷಕರು ಇದನ್ನು ಬೆಳೆಸಬೇಕಾಗಿದೆ ಎಂದರು.
ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣ ನೀರಮೂಲೆ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಎಸ್. ರೇವಣ್ ಕರ್ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಮುರಲೀ ಮೋಹನ್ ಚೂಂತಾರು ಸ್ವಾಗತಿಸಿ, ಪ್ರಸ್ತಾವನೆಗೈದರು.
ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ಸನ್ಮಾನಿತರ ಪರಿಚಯಗೈದರು.
ರೇಖಾ ಶಂಕರ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ವಂದಿಸಿದರು.