ಸಾಧಕನ ಹಿಂದೆ ಗುರು ಇದ್ದೇ ಇರುತ್ತಾನೆ: ಶಾಸಕ ಡಾ.ಕೆ.ಅನ್ನದಾನಿ ಅಭಿಮತ

Mal
Published on

ಮಳವಳ್ಳಿ: ವೃತ್ತಿಯನ್ನು ಗೌರವಿಸುವ ಶಿಕ್ಷಕರು ಪ್ರತಿನಿತ್ಯ ಅಭ್ಯಾಸ ಮಾಡಿಕೊಂಡು ಬದಲಾಗುವ ವಿದ್ಯಮಾನಗಳ ಅರಿತು ಪಾಠ-ಪ್ರವಚನಗಳನ್ನು ಮಾಡುವುದರಿಂದ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಲು ಸಾಧ್ಯ ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾನೂ ಒಬ್ಬ ಅಧ್ಯಾಪಕನಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದೇನೆ. ಪ್ರತಿಯೊಬ್ಬ ವ್ಯಕ್ತಿ ಪ್ರಪಂಚದ ಯಾವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರೂ ಅದರ ಹಿಂದೆ ಒಬ್ಬ ಗುರು ಇದ್ದೇ ಇರುತ್ತಾನೆ. ಆದ್ದರಿಂದ ದೊಡ್ಡ ಉದ್ಯಮಿ, ರಾಜಕಾರಣಿ ಅಥವಾ ಉನ್ನತ ಮಟ್ಟದ ಅಧಿಕಾರಿಗಳಾಗಿ ಕೆಲಸ ಮಾಡಿ ಸಿಗುವ ಸಂತಸಕ್ಕಿಂತ ಶಿಕ್ಷಕ ವೃತ್ತಿಯಲ್ಲಿ ಸಿಗುವ ಗೌರವ ಹಾಗೂ ಸಂತೃಪ್ತಿಯ ಜೀವನ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದರು.

ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನಾತ್ಮಕವಾಗಿ ದೊರಕಿರುವ ಅಧಿಕಾರವನ್ನು ಬಳಸಿಕೊಂಡು ಶಿಕ್ಷಕರ ವಿವಿಧ ಸಮಸ್ಯೆಗಳ ಬಗೆಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಜ್ಯೋತಿಬಾ ಫುಲೆ, ಸಾವಿತ್ರಿಬಾ ಫುಲೆ ಅವರ ಭಾವಚಿತ್ರಗಳನ್ನು ಬೆಳ್ಳಿ ಸಾರೋಟಿನಲ್ಲಿರಿಸಿ ಪ್ರಮುಖ ರಸ್ತೆಗಳಲ್ಲಿ ಡೊಳ್ಳು, ತಮಟೆ ಜಾನಪದ ಕಲಾತಂಡಗಳೊಡನೆ ಮೆರವಣಿಗೆ ನಡೆಸಲಾಯಿತು. ನೂರಾರು ಶಿಕ್ಷಕರು, ಶಾಸಕ ಡಾ.ಕೆ.ಅನ್ನದಾನಿ ಹಾಗೂ ಹಲವು ಜನಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಉಪಾಧ್ಯಕ್ಷ ಪ್ರಶಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಪುಟ್ಟಸ್ವಾಮಿ, ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಪುರಸಭೆ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net