ಶಿಕ್ಷಕರ ದಿನಾಚರಣೆಗೆ ಅತ್ಯುತ್ತಮರಿಗೆ ಪ್ರಶಸ್ತಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Teachers Day Preparatory Meeting Mandya
Published on

ಮಂಡ್ಯ: ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.5ರಂದು ಆಯೋಜಿಸಲಿರುವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಯ್ದ 24 ಅತ್ಯುತ್ತಮ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 5ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುವುದು. ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು. ಅಂತೆಯೇ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಗುವುದು. ಆಗಮಿಸುವಂತಹ ಅತಿಥಿ ಗಣ್ಯರು ಹಾಗೂ ಶಿಕ್ಷಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಶಿಸ್ತಿನಿಂದ ಶಿಕ್ಷಕರ ದಿನವನ್ನು ಆಚರಿಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿನ ಕಾರಾಗೃಹದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ತರಬೇತಿ ನೀಡುವ ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಗೌರವಿಸಿ ಹಾಗೂ ಅವರಲ್ಲಿ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ. ಚಲುವಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net