

ಮಂಡ್ಯ: ಶಿಕ್ಷಕರ ಅರ್ಹತಾ ಪರೀಕ್ಷೆ ನ. 6ರಂದು ನಗರದ 14 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್.ನಾಗರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 6ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೊದಲ ಪರೀಕ್ಷೆ ನಡೆಯಲಿದೆ. 2,341 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಧ್ಯಾಹ್ನ 2 ರಿಂದ 4.30 ರವರೆಗೆ ಎರಡನೇ ಪರೀಕ್ಷೆ ನಡೆಯಲಿದ್ದು, 3445 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂಗವಿಕಲರಿಗೆ ನಿಗದಿಪಡಿಸಿರುವಂತೆ ಪರೀಕ್ಷೆ ಬರೆಯಲು ಹೆಚ್ಚಿನ ಸಮಯಾವಕಾಶ ಒದಗಿಸಲಾಗುವುದು ಎಂದರು.
ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲ:
ಪರೀಕ್ಷೆ ಪಾರದರ್ಶಕವಾಗಿ ನಡೆಯಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲುಕ್ಯುಲೇಟರ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತಂದರೆ ಸ್ವಾಧೀನ ಮಾಡಿಕೊಂಡ ಪರೀಕ್ಷೆಯ ನಂತರ ನೀಡಲಾಗುವುದು. ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ವ್ಯವಸ್ಥೆಯಾಗಬೇಕು. ಅದರ ಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ಮುಂಚಿತವಾಗಿ ಖಾತ್ರಿ ಮಾಡಿಕೊಳ್ಳಬೇಕು. ಬೇಕಿರುವ ಸ್ಥಳಗಳಲ್ಲಿ ವಿಡಿಯೋಗ್ರಫಿ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರ, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಗೃಹದ ವ್ಯವಸ್ಥೆಯಾಗಬೇಕು. ಎಲ್ಲ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿ ಒಳಗೊಂಡ ತಂಡ ನ.5ರಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ ಒಬ್ಬರು ಶ್ರವಣ ತಜ್ಞರನ್ನು ನೇಮಕ ಮಾಡಲಾಗುವುದು. ಅವರು ಶ್ರವಣ ಸಾಧನ ಹೊಂದಿರುವ ಅಭ್ಯರ್ಥಿಗಳ ಸಾಧನವನ್ನು ಪರೀಕ್ಷಿಸಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಪ್ರತಿ ಕೇಂದ್ರಕ್ಕೆ ಅಧೀಕ್ಷಕರು, ಸ್ಥಾನಿಕ ಜಾಗೃತದಳ ಅಧಿಕಾರಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯನ್ನು ಪರೀಕ್ಷಾ ದಿನದಂದು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.
ಸಭೆಯಲ್ಲಿ ಡಿಡಿಪಿಐ ಜವರೇಗೌಡ, ಶಿಕ್ಷಣಾಧಿಕಾರಿ ಮಹೇಶ್, ಪವನ್ ಇತರರಿದ್ದರು.