ವಿದ್ಯಾರ್ಥಿಗಳನ್ನು ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಕೆ.ಜಿ.ಬೋಪಯ್ಯ

5adarshkdga3
Published on

ಮಡಿಕೇರಿ: ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರಲ್ಲಿ ದೊಡ್ಡ ಪಾತ್ರವಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.


ಶಿಕ್ಷಕರು ಎಂದರೆ ಗುರುಗಳು, ಗುರು ಬ್ರಹ್ಮ-ಗುರುವಿಷ್ಣು-ಗುರುದೇವೋ ಮಹೇಶ್ವರ ಎಂಬಂತೆ ವಿದ್ಯಾರ್ಥಿಗಳನ್ನು ಒಳ್ಳೆಯ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರಲ್ಲಿ ಹೆಚ್ಚಿನ ಹೊಣೆಗಾರಿಕೆ ಇದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರ ಮಾತೇ ವೇದ ವಾಕ್ಯವಾಗಿರುತ್ತದೆ. ಆದ್ದರಿಂದ ಸಮಾಜದ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ನುಡಿದರು.


ಹಿಂದೆ ಶಿಕ್ಷಕರನ್ನು ಕಂಡರೆ ವಿದ್ಯಾರ್ಥಿಗಳಿಗೆ ಭಯವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ಬದಲಾಗಿದೆ. ಆದರೂ ವಿದ್ಯಾರ್ಥಿಗಳು ಶಿಕ್ಷಕರನ್ನು ಸದಾ ಸ್ಮರಿಸುತ್ತಾರೆ ಎಂದ ಅವರು, ರಾಷ್ಟ್ರದಲ್ಲಿ ಒಂದೇ ರೀತಿಯ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿಯನ್ನು ಸರ್ಕಾರ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸಮಗ್ರ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಮಾನ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಹೇಳಿದರು.


ಅನೇಕ ಸರ್ಕಾರಿ ಶಾಲೆಗಳನ್ನು ಪಬ್ಲಿಕ್ ಶಾಲೆಗಳನ್ನಾಗಿ ಆರಂಭಿಸಲಾಗಿದೆ. ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಪದವಿ ವರೆಗೂ ಎಲ್ಲರಿಗೂ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಸರ್ವ ಶಿಕ್ಷಣ ಅಭಿಯಾನ ಜಾರಿಗೊಳಿಸಿ, ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣ ಗುಣಮಟ್ಟಕ್ಕೆ ಗಮನಹರಿಸಿದ್ದರು ಎಂದು ವಿವರಿಸಿದರು.


ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿದ್ದಲ್ಲಿ ಸದಾ ಸ್ಮರಿಸಿಕೊಳ್ಳುತ್ತಾರೆ ಎಂದರು.


ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ನನ್ನ ತಂದೆಯವರು ಶಿಕ್ಷಕರಾಗಿದ್ದು, ಶಿಕ್ಷಕರ ಮೇಲೆ ಅತಿಯಾದ ಪ್ರೀತಿ ಗೌರವ ಅಭಿಮಾನ ಇದೆ. ಶಿಕ್ಷಕರು ಚುನಾವಣೆ, ಜನಗಣತಿ, ಮತ್ತಿತರ ಕಾರ್ಯಗಳನ್ನು ತೃಪ್ತಿಯುತವಾಗಿ ಶ್ರದ್ಧೆಯಿಂದ ಮಾಡುತ್ತಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಶಿಕ್ಷಕರು ಕೆಲಸ ಮಾಡಿದ್ದಾರೆ. ಚುನಾವಣಾ ಸಂದರ್ಭದಲ್ಲೂ ಶಿಕ್ಷಕರ ಕಾರ್ಯವೈಖರಿ ಶ್ಲಾಘನೀಯ. ಜಿಲ್ಲೆಯಲ್ಲಿ ’ಗುರುಭವನ’ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಸರ್ವಪಳ್ಳಿ ರಾಧಾಕೃಷ್ಣರವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಶಾಲೂ, ಫಲ ತಾಂಬೂಲ, ಪದಕ ನೀಡಿ ಗಣ್ಯರು ಅಭಿನಂದಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಶಾಸಕರು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿ?್ಠಾಧಿಕಾರಿ ಎಂ.ಎ.ಅಯ್ಯಪ್ಪ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಅಧ್ಯಕ್ಷ ಪೊನ್ನಚ್ಚಣ ಶ್ರೀನಿವಾಸ್, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ ಇತರರಿದ್ದರು.

’ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಕೂಡ ಅವರಿಗೆ ನೀಡಿದ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಾರೆ. ಶಿಕ್ಷಕರ ಕಾರ್ಯವೈಖರಿ ಎಲ್ಲರಿಗೂ ಮಾದರಿ. ಈ ಬಾರಿ ಫಲಿತಾಂಶದಲ್ಲಿ ಜಿಲ್ಲೆಯೂ ಉತ್ತಮ ಸಾಧನೆ ಮಾಡಿದೆ. ಇದರಲ್ಲಿ ಶಿಕ್ಷಕರ ಪರಿಶ್ರಮವೂ ಇದೆ ಎಂಬುದನ್ನು ಮರೆಯುವಂತಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಫಲಿತಾಂಶ ಪಡೆದು ಅಗ್ರ ಐದರಲ್ಲಿ ಬರುವಂತಾಗಲಿ’.
ಭಂವರ್ ಸಿಂಗ್ ಮೀನಾ, ಜಿಪಂ.ಸಿಇಒ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net