ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು

5adarshkdga2
Published on

ಮಡಿಕೇರಿ: ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.


ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.


ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದ ಅವರು, ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು ಸದಾ ಯೋಚಿಸುತ್ತಾರೆ ಎಂದರು.


ಕೊಡಗು ಜಿಲ್ಲೆ ಶೈಕ್ಷಣಿಕವಾಗಿ ಮುಂದೆ ಇದೆ. ಆ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿಯೂ ಸಹ ಇನ್ನಷ್ಟು ಉನ್ನತ ಸ್ಥಾನ ಪಡೆಯುವಂತಾಗಬೇಕು ಎಂದು ಮಂತರ್ ಗೌಡ ಹೇಳಿದರು.


ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ದಾರಿದೀಪವಾಗಿದ್ದಾರೆ. ಮಕ್ಕಳಿಗೆ ತಾಳ್ಮೆ, ಸಹನೆ ಕಲಿಸಿ, ಅಕ್ಷರ ಅಭ್ಯಾಸ ಮಾಡಿಸುತ್ತಾರೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ಶಿಕ್ಷಕರು ಶ್ರಮಿಸುತ್ತಾರೆ. ಶಿಕ್ಷಕರ ವೃತ್ತಿಯನ್ನು ಸದಾ ಸ್ಮರಿಸುತ್ತಾರೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.


ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ಶಿಕ್ಷಕರೇ ದೇವರಾಗಿದ್ದು, ಶಿಕ್ಷಕರನ್ನು ಸದಾ ಗೌರವಿಸುತ್ತೇವೆ. ಎಲ್ಲಾ ಮಕ್ಕಳನ್ನು ಪ್ರೀತಿ, ಗೌರವದಿಂದ ಕಾಣುತ್ತಾರೆ. ಮಕ್ಕಳ ವಿದ್ಯಾರ್ಜನೆಯ ಜೊತೆಗೆ ಅವರ ಅಭಿರುಚಿಯನ್ನು ಗುರುತಿಸಿ ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಹೀಗೆ ಹಲವು ಕ್ಷೇತ್ರಗಳಿಗೂ ಶಿಕ್ಷಕರು ಪ್ರೋತ್ಸಾಹಿಸುತ್ತಾರೆ ಹೇಳಿದರು.


ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಎಚ್.ಎಸ್.ಚೇತನ್ ಮಾತನಾಡಿ, ಶಿಕ್ಷಕರ ದಿನಾಚರಣೆ ಸಂಘಟನೆಗೆ ಮುಂದಿನ ದಿನಗಳಲ್ಲಿ ಧತ್ತಿನಿಧಿ ಸ್ಥಾಪಿಸಲಾಗುವುದು. ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ಶಿಕ್ಷಕರ ಸಂಘ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.


ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎ.ಯೋಗೇಶ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಸೌಮ್ಯ ಪೊನ್ನಪ್ಪ, ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net