ಶಿಕ್ಷಕರಿಗೆ ಸರಿಯಾದ ಗೌರವ ಸಿಗಲಿ

Siddapur Teachers Day
Published on

ಸಿದ್ದಾಪುರ: ಶಿಕ್ಷಕರ ಯಾವುದೇ ಸಮಸ್ಯೆ ಇದ್ದರೂ ಅದು ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ. ಸಮಾಜದ ಸುಸಂಸ್ಕೃತ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಕರಿಗೆ ಸರಿಯಾದ ಗೌರವ ಸಿಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವ ಸಮರ್ಪಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳನ್ನು ಈಗಾಗಲೇ ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದೆ. ಸಿದ್ದಾಪುರದಲ್ಲಿ ಗುರುಭವನ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ, ಸ್ಥಳ ಗುರುತಿಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಲಕ್ಷ ಸತೀಶ ಹೆಗಡೆ ಅವರು ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತರನ್ನು, ನಿವೃತ್ತ ಶಿಕ್ಷಕರನ್ನು, ಡಾ.ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು, ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಗೌರವಿಸಲಾಯಿತು.

ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಭೂಮೇಶ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ. ನಾಯ್ಕ, ತಾಲೂಕು ಕಸಾಪ ಅಧ್ಯಕ್ಷ ಗೋಪಾಲ ನಾಯ್ಕ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್. ನಾಯ್ಕ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಪಮ್ಮಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ ನಾಯ್ಕ, ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಎಂ.ಜಿ., ಶಿಕ್ಷಣ ಸಂಯೋಜಕ ಮಹೇಶ ಹೆಗಡೆ ಇತರರಿದ್ದರು.

ಬಿಇಒ ಜಿ.ಐ. ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಗೀತಾ ಬಿ.ಸಿ., ಶ್ರುತಿ ಪಟಗಾರ, ಚೈತನ್ಯ ಕುಮಾರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net