ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಬೆಳೆಸಬೇಕು: ಬೇಬಿಮ್ಯಾಥ್ಯೂ

sceince samavesh
Published on

ಮಡಿಕೇರಿ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ವೈಜ್ಞಾನಿಕ ಅನ್ವೇಷಣೆ ಬೆಳೆಸುವ ಮೂಲಕ ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಸಲಹೆ ನೀಡಿದರು.


ನಗರದ ಕೊಡಗು ವಿದ್ಯಾಲಯ, ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ ೩೧ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆ ನಡೆಸಲು ಸಹಕಾರಿಯಾಗಿದ್ದು, ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಸಹಕಾರಿಯಾಗಿದೆ. ವಿಜ್ಞಾನ ಸಮಾವೇಶ ಸೇರಿದಂತೆ ಪರಿಸರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಹಾಗೂ ಪರಿಸರದ ಆಸಕ್ತಿ ಬೆಳೆಸುತ್ತಿರುವುದು ಶ್ಲಾಘನೀಯವಾದುದು ಎಂದು ಹೇಳಿದರು.


ಸಮಾವೇಶದ ತಾಂತ್ರಿಕ ಅಧಿವೇಶನಕ್ಕೆ ಚಾಲನೆ ನೀಡಿ ಮಾತನಾಡಿದ ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿದ್ಯಾರ್ಥಿಗಳು ವಿಜ್ಞಾನಿಗಳ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಂಶೋಧನೆ ಕೈಗೊಂಡು ವಿಜ್ಞಾನದ ಸವಾಲುಗಳನ್ನು ಎದುರಿಸುವಲ್ಲಿ ಸನ್ನದ್ಧರಾಗಬೇಕು ಎಂದರು.


ಕಿರಿಯ ವಿಜ್ಞಾನಿಗಳು ತಯಾರಿಸಿದ್ದ ವೈಜ್ಞಾನಿಕ ಯೋಜನೆ ಹಾಗೂ ಮಾದರಿಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ ಅವರು, ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಇಂತಹ ಸೂಕ್ತ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ವೀಣಾ ಹೇಳಿದರು.


ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಭಾಸ್ಕರ್ ಮಾತನಾಡಿ, ಪ್ರಾಕೃತಿಕ ಸಂಪನ್ಮೂಲ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಪರಿಸರ ಮತ್ತು ವನ್ಯಜೀವಿಗಳ ಪಾತ್ರ ಪ್ರಮುಖವಾದುದು. ಜಿಲ್ಲೆಯಲ್ಲಿ ನಡೆಯುತ್ತಿರುವ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಬಗ್ಗೆ ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನ ಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಲು ಪ್ರತಿಯೊಬ್ಬರು ಪಣ ತೊಡಬೇಕಿದೆ ಎಂದರು.


ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಪರಿಕಲ್ಪನೆ ಹಾಗೂ ಉದ್ದೇಶದ ಕುರಿತು ಮಾಹಿತಿ ನೀಡಿದ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳ ವಿಜ್ಞಾನ ಸಮಾವೇಶ ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆ ನೀಡುತ್ತದೆ. ತಮ್ಮ ಸುತ್ತಲಿನ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸ್ವತಃ ತಾವೇ ಪರಿಹಾರ ಕಂಡುಕೊಳ್ಳುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಹಾಗೂ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ಮಾತನಾಡಿ, ಇಂತಹ ವಿಜ್ಞಾನ ಸಮಾವೇಶಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಭವಿಷ್ಯದಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರೇಪಣೆ ನೀಡಲು ಸಹಕಾರಿಯಾಗಿವೆ ಎಂದರು.
ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ೨೪ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದರು.


ಸಮಾವೇಶದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪಿ.ರವಿ, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ಶೈಕ್ಷಣಿಕ ಸಂಯೋಜಕ ಎಂ.ಎನ್.ವೆಂಕಟನಾಯಕ್, ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳಾದ ಜಿ.ಶ್ರೀನಾಥ್, ಎಸ್.ಎಚ್.ಈಶ, ಟಿ.ವಿ.ಶೈಲಾ, ಸಿಆರ್‌ಪಿ ಪಿ.ಆರ್.ಕಲ್ಪನ, ಬಿಆರ್‌ಪಿ ಮಂಜುಳಾ ಚಿತ್ರಾಪುರ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net