

ಮಳವಳ್ಳಿ: ಸರ್ಕಾರಿ ಶಾಲಾ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣೆ, ಚುನಾವಣೆ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರೊಂದಿಗೆ ಸಂವಾದ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದರ ನಡುವೆ ಶಾಲೆಗಳಲ್ಲಿ ಬಿಸಿಯೂಟ ನಿರ್ವಹಣೆ ಹೊಣೆಗಾರಿಕೆ ಜತೆಗೆ ಚುನಾವಣಾ ಸಂಬಂಧಿತ ಹಾಗೂ ಇತರ ಇಲಾಖೆಗಳ ಮಾಹಿತಿಗಳ ಸಂಗ್ರಹಣೆಗಾಗಿ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಶಾಲಾ ಪಠ್ಯಕ್ರಮದಲ್ಲಿನ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕಲಿಸಲು ತೊಂದರೆಯಾಗುತ್ತಿದೆ. ಈ ವಿಚಾರವಾಗಿ ಸರ್ಕಾರದ ಗಮನ ಸೆಳೆಯಲಾಗುವುದು. ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರಕಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ತಾಲೂಕಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿದ್ದು, ಅದರ ಅನುಷ್ಠಾನಕ್ಕೆ ಸಾರ್ವಜನಿಕ ವಲಯದ ಜತೆಗೆ ಶಿಕ್ಷಕರ ಸಹಕಾರವೂ ಅಗತ್ಯ ಎಂದರು.
ಇಂಟರ್‌ನೆಟ್ ಸೌಲಭ್ಯ ಇಲ್ಲದ ಶಾಲೆಗಳಿಗೆ ವೈಯಕ್ತಿಕವಾಗಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು. ಕ್ಷೇತ್ರದಲ್ಲಿ ಬರದ ಪರಿಸ್ಥಿತಿ ನಿಭಾಯಿಸುವುದರ ಜತೆಗೆ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿಗೂ ಹೆಚ್ಚುವರಿ ಅನುದಾನಕ್ಕೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದೇನೆ ಎಂದು ಮಾಹಿತಿ ನೀಡಿದರು.
ನಿವೃತ್ತಿ ಹೊಂದಿದ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು. ತಾಪಂ ಇಒ ಎಲ್.ಮಮತಾ, ಬಿಇಒ ಚಂದ್ರ ಪಾಟೀಲ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖ್ಯಶಿಕ್ಷಕರ ಅಧ್ಯಕ್ಷ ಗುರುಸ್ವಾಮಿ, ಪುರಸಭೆ ಸದಸ್ಯ ಶಿವಸ್ವಾಮಿ, ಬ್ಲಾಕ್ ಅಧ್ಯಕ್ಷ ಕಲ್ಕುಣಿ ದೇವರಾಜು ಇತರರು ಇದ್ದರು.