

ಸಿರಗುಪ್ಪ: ಕಾಲಮಿತಿಯೊಳಗೆ ಪರಿಶಿಷ್ಟರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಕುಂದುಕೊರತೆ ಸಭೆ ಉದ್ಘಾಟಿಸಿ ಮಾತನಾಡಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಎಸ್ಸಿ, ಎಸ್ಟಿ ಸಮುದಾಯದ ಕುಂದುಕೊರತೆ ಸಭೆ ಮಾಡಲಾಗುವುದು ಎಂದು ತಿಳಿಸಿದರು.
ನಗರದ ವಾಲ್ಮೀಕಿ ವೃತ್ತದ ಸುತ್ತಮುತ್ತ ಸ್ವಚ್ಛತೆ ಇಲ್ಲದೆ ದುರ್ವಾಸನೆ ಬೀರುತ್ತಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಟಮಟ್ಟದ ಶಿಕ್ಷಣ ನೀಡುವುದರೊಂದಿಗೆ ಇಂಗ್ಲಿಷ್ ಮಾಧ್ಯಮ ಆರಂಭಿಸಬೇಕು. ಗ್ರಾಮೀಣ ಭಾಗದಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ಪರಿಶಿಷ್ಟ ಸಮುದಾಯದ ಜನರು ಕುಡಿತಕ್ಕೆ ಒಳಗಾಗಿ, ಕುಟುಂಬವನ್ನು ಬೀದಿಪಾಲು ಮಾಡುತ್ತಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಮುದಾಯದವರು ಆಗ್ರಹಿಸಿದರು.
ತಾಪಂ ಇಒ ಪವನ್ ಕುಮಾರ್ ಎಸ್., ಸಿಪಿಐ ವೈ.ಎಸ್.ಹನುಮಂತಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ವಿವಿಧ ಇಲಾಖೆ ಅಧಿಕಾರಿಗಳು, ಎಸ್ಸಿ, ಎಸ್ಟಿ ಸಮುದಾಯದವರು ಇದ್ದರು.