

ಉಡುಪಿ: ವಿದ್ಯಾರ್ಥಿ ದಿಸೆಯಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಶ್ರದ್ಧೆ ಮತ್ತು ಕರ್ತವ್ಯ ನಿಷ್ಠೆಯನ್ನು ಪಾಲಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡಲ್ಲಿ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಅಮೃತ್ ಸಹಯೋಗದಲ್ಲಿ ರಾಷ್ಟ್ರೀಯ ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ದೈಹಿಕ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜು ಹಂತದಲ್ಲಿ ಯಾವುದೇ ಆಮಿಷಗಳಿಗೆ ಬಲಿ ಬೀಳದೇ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಉತ್ತಮ ಪ್ರಜೆಯಾಗಿ ದೇಶಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ತಿಳಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು. ಜಿಲ್ಲಾ ಸರ್ಜನ್ ಡಾ.ವೀಣಾ ರಕ್ತದಾನದ ಮಹತ್ವವನ್ನು ವಿವರಿಸಿದರು. ಲಯನ್ ಅಮೃತ್ ಅಧ್ಯೆ ಭಾರತಿ ಎಚ್.ಎನ್. ಹಾಗೂ ರೆಡ್ಕ್ರಾಸ್ ಉಡುಪಿ ಜಿಲ್ಲಾಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಉಪಸ್ಥಿತರಿದ್ದರು. ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಡಾ. ಪ್ರಸಾದ್ ರಾವ್ ಎಂ. ವಂದಿಸಿದರು. ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು.