

ಹುಬ್ಬಳ್ಳಿ: ಹೊಸ ಟರ್ಮಿನಲ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಿದೆ. ಮತ್ತಷ್ಟು ಮೇಲ್ದರ್ಜೆ ಸೌಲಭ್ಯ ಒದಗಿ ಬರಲಿವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಪಥ ವೇಗ ಪಡೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಇಲ್ಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿಯ ಪ್ರಗತಿ ವೀಕ್ಷಣೆ ನಡೆಸಿ, ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಭಾನುವಾರ ಅವರು ಮಾತನಾಡಿದರು.
2.5 ಲಕ್ಷ ಪ್ರಯಾಣಿಕರ ನಿರೀಕ್ಷೆ ಇರಿಸಿಕೊಂಡು 270 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಆಗಿ ಟರ್ಮಿನಲ್ ನಿರ್ಮಿಸಲಾಗುತ್ತಿದೆ ಎಂದರು.
ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅಭಿವೃದ್ಧಿ ಪಡಿಸುತ್ತಿದ್ದು, ಈಗಾಗಲೇ ಕಾಮಗಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದರು.
ಸದ್ಯಕ್ಕೆ 4 ವಿಮಾನಗಳು ನಿಲ್ಲುವ ಸ್ಥಳವಿದ್ದು, ಅದನ್ನೀಗ ಸುಮಾರು 10 ಏರ್‌ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶಕ್ಕೆ ವಿಸ್ತರಿಸಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಚರ್ಚೆ ಕೂಡ ನಡೆಸಿದರು.
2024ರ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು 273 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕಾಮಗಾರಿ ವೇಗ ಪಡೆಯುತ್ತಿದೆ ಎಂದರು.
ಈ ಮಹತ್ತರ ಕಾಮಗಾರಿಗೆ ಸಮ್ಮತಿ ನೀಡಿ ಕೈಗೆತ್ತಿಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧೆ ಅವರಿಗೆ ಅಭಿನಂದನೆ ಸಲ್ಲಿಸಿದರು.
ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ಮೇಯರ ರಾಮಪ್ಪ ಬಡಿಗೇರ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಉಪಸ್ಥಿತರಿದ್ದರು.