ಟಿಇಟಿ ಪರೀಕ್ಷೆಗೆ 3,892 ನೋಂದಣಿ: ಡಿಸಿ ಕಚೇರಿ ಸಹಾಯಕಿ ಡಾ.ರೋಹಿಣಿ ಮಾಹಿತಿ

TET Exam Prelims Meeting Mandya
Published on

ಮಂಡ್ಯ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಜಿಲ್ಲೆಯಲ್ಲಿ 3,892 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ಡಾ.ರೋಹಿಣಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.30ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮೊದಲ ಪತ್ರಿಕೆ, ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ 2ನೇ ಪತ್ರಿಕೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 11 ಕೇಂದ್ರದಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಪತ್ರಿಕೆಗೆ 1,346 ಮತ್ತು ಎರಡನೇ ಪತ್ರಿಕೆಗೆ 2,546 ಅಭ್ಯರ್ಥಿಗಳು ಒಟ್ಟು 3,892 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ಪರೀಕ್ಷೆಯು ನಡೆಯುವ ದಿನದಂದು ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು. ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು. ಪರೀಕ್ಷೆ ಪ್ರಾರಂಭವಾಗುವ ಮೊದಲು ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕು. ಕಡ್ಡಾಯವಾಗಿ ಪ್ರವೇಶ ಪತ್ರ ಹಾಗೂ ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿಯೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕು. ಪರೀಕ್ಷಾರ್ಥಿಗಳು ಒಮ್ಮೆ ಕೇಂದ್ರದ ಒಳಗೆ ಪ್ರವೇಶಿಸಿದ ನಂತರ ಎರಡು ಪತ್ರಿಕೆ ಪರೀಕ್ಷೆ ಮುಗಿದ ನಂತರ ಮಾತ್ರವೇ ಹೊರಗೆ ಹೋಗಲು ಅವಕಾಶವಿರುತ್ತದೆ ಎಂದು ಸೂಚನೆ ನೀಡಿದರು.

ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂಥ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಟ್ಸ್, ಕ್ಯಾಲ್ಕುಲೇಟರ್ ಇತ್ಯಾದಿ ತರುವುದನ್ನು ನಿಷೇಧಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳುವ ಮತ್ತು ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ಖಜಾನೆಯಲ್ಲಿ ಸಂರಕ್ಷಿಸಿ ಇಡುವ ಸಂದರ್ಭಗಳಲ್ಲಿ ಖಜಾನಾಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ನೇಮಕ ಮಾಡಬೇಕು. ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ಹೇಮಲತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net