ಮಂಗಳೂರು: ನಗರದ ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯೊಂದರಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೊಸಬೆಟ್ಟು ನಿವಾಸಿಯಾಗಿದ್ದು, ಪ್ರಸ್ತುತ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಇರುವ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಣ್ಣಪ್ಪ ಸ್ವಾಮಿ (26) ಬಂಧಿತರು.
ಬಂಧಿತ ಆರೋಪಿಯಿಂದ ಸುಮಾರು 1,50,000 ರೂ. ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,10,500 ರೂ. ಆಗಿರುತ್ತದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.