ಅಂಧ ವಿಶೇಷಚೇತನರು ಶಿಬಿರದ ಸದುಪಯೋಗ ಪಡೆಯಿರಿ

MDK05
Published on

ಮಡಿಕೇರಿ: ಅಂಧ ವಿಶೇಷಚೇತನರು ವಸತಿಯುತ ಶಿಬಿರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಎಂ.ಅಣ್ಣಯ್ಯ ಸಲಹೆ ನೀಡಿದರು.


ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ತಾಲೂಕು ಒಕ್ಕಲಿಗರ ಸಂಘ ಸೋಮವಾರಪೇಟೆ, ನಗರ ಒಕ್ಕಲಿಗರ ಸಂಘ ಸೋಮವಾರಪೇಟೆ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚೆಗೆ ಅಂಧ ವಿಶೇಷಚೇತನರಿಗೆ ಸ್ಥಳ ಪರಿಜ್ಞಾನ ಮತ್ತು ಚಲನವಲನ ವಸತಿಯುತ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಅಂಧ ವಿಶೇಷಚೇತನರಿಗೆ ೪ ದಿನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.


ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಆರ್.ಮುತ್ತಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ವತಿಯಿಂದ ವಿಶೇಷಚೇತನರಿಗೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಉತ್ತಮ ಕೆಲಸ. ಇಂತಹ ಕೆಲಸಗಳಿಗೆ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ವ್ಯವಸ್ಥಾಪನ ಸಮಿತಿ ಸದಸ್ಯ ಪಿ.ಕೆ.ರವಿ ಮಾತನಾಡಿ, ಯೂತ್ ಮೂವ್‌ಮೆಂಟ್ ಸಂಸ್ಥೆಯು ಆರೋಗ್ಯ, ಸಾಮಾಜಿಕ ಆರ್ಥಿಕ ಸಬಲೀಕರಣ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತ ಸೇವೆ ನೀಡುತ್ತಾ ಬಂದಿದೆ. ಜಿಲ್ಲೆಯಲ್ಲಿರುವ ವಿಶೇಷಚೇತನರನ್ನು ಗುರುತಿಸಿ ವಿಶೇಷಚೇತನರಿಗೆ ಅಗತ್ಯವಾಗಿರುವ ಶಿಬಿರ ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರದ ಸದುಪಯೋಗವನ್ನು ಭಾಗವಹಿಸುವ ಪ್ರತಿಯೊಬ್ಬ ವಿಶೇಷಚೇತನರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಒಟ್ಟು ಹದಿನೈದು ಅಂಧ ವಿಶೇಷಚೇತನರು ಭಾಗವಹಿಸಿದ್ದರು. ವೇದಿಕೆಯಲ್ಲಿ ನಗರ ಒಕ್ಕಲಿಗರ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net