

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುದಾನ ದೊರೆತಿದೆ. ಬೈಪಾಸ್ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದೆ. ಈ ಕಾಮಗಾರಿಯು 2025ರ ಜೂನ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಇಲ್ಲಿಯ ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ನಿರ್ಮಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ನೇಕಾರ ನಗರ, ತಾರಿಹಾಳ ಹಾಗೂ ಇತರೆಡೆ ಕೆಲ ವರ್ಷಗಳಿಂದ ಹೆದ್ದಾರಿ ಪಕ್ಕದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಬೇರೆಡೆ ತೆರಳುವಂತೆ ಸೂಚಿಸಲಾಗಿದೆ. ಅಲ್ಲದೆ ಅವರಿಗೆ ಪರಿಹಾರ ವಿತರಿಸಲಾಗುವುದು ಎಂದರು.
ಸ್ವಾಗತ ಫಲಕ ಅಳವಡಿಕೆ: ಇನ್ಫೋಸಿಸ್‌ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಹೆದ್ದಾರಿಯಿಂದ ಹುಬ್ಬಳ್ಳಿ ನಗರಕ್ಕೆ ಆಗಮಿಸುವವರಿಗೆ ಅತ್ಯಾಕರ್ಷಕ ಹುಬ್ಬಳ್ಳಿ ನಗರಕ್ಕೆ ಸ್ವಾಗತ ಎನ್ನುವ ಫಲಕ ಅಳವಡಿಸಲಾಗುತ್ತದೆ. ವೃತ್ತ ನಿರ್ಮಿಸಿ, ಪೌಂಟೇನ್ ಮಾದರಿ ಕಟ್ಟಲು ಕ್ರಮ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೆದ್ದಾರಿ ನಿರ್ಮಾಣಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಕಾರ ಕೂಡ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಡಿಸಿಪಿ ಸಿ.ಆರ್. ರವೀಶ, ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಭುವನೇಶ್ವರಕುಮಾರ ಇತರರು ಉಪಸ್ಥಿತರಿದ್ದರು.