ಫ್ಲೈಓವರ್ ಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ

h30-Joshi Flyover
Published on

ಹುಬ್ಬಳ್ಳಿ: ನಗರದ ಪಿಬಿ ರಸ್ತೆಯ ಹಳೇ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ ಮೇಲ್ಸೇತುವೆ ರಸ್ತೆ ನಿರ್ವಿುಸಿ, ಬೆಂಗಳೂರು ಮಾರ್ಗದಲ್ಲಿ ಸುಗಮ ಸಂಚಾರ ಕಲ್ಪಿಸುವ 300 ಕೋಟಿ ರೂ. ಯೊಜನೆ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಸõತ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗಾಗಿ ಇಲ್ಲಿನ ರ್ಸಟ್ ಹೌಸ್​ನಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫ್ಲೈಓವರ್ ವಿಸ್ತರಣೆಗಾಗಿ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಹಿರಿಯ ಅಧಿಕಾರಿಗಳು 15 ದಿನಗಳೊಳಗೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ವಿಸõತ ಯೋಜನಾ ವರದಿ ಸಲ್ಲಿಸಬೇಕು ಎಂದರು.
ಹುಬ್ಬಳ್ಳಿ - ಧಾರವಾಡದ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡಲು ರಾಮನಗರ- ಅಳ್ನಾವರ- ಧಾರವಾಡ- ಕುಸುಗಲ್ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.
ಅವಳಿನಗರದಲ್ಲಿ ಸರಬರಾಜು ಆಗುತ್ತಿರುವ ಕುಡಿಯುವ ನೀರಿನಲ್ಲಿ ಇತರ ಕೊಳವೆ ಮಾರ್ಗದ ನೀರು ಮಿಶ್ರಣವಾಗುತ್ತಿರುವ ಬಗ್ಗೆ ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕುಡಿಯುವ ನೀರು ಮಲಿನವಾಗದಂತೆ ಎಚ್ಚರ ವಹಿಸಬೇಕು ಎಂದರು.
ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಪ್ರಸಾದ ಅಬ್ಬಯ್ಯ, ಮೇಯರ್ ಈರೇಶ ಅಂಚಟಗೇರಿ ಮಾತನಾಡಿದರು.
ಶಾಸಕ ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಡಾ. ಸುರೇಶ ಇಟ್ನಾಳ, ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಎಸ್ಪಿ ಲೋಕೇಶ ಜಗಲಾಸರ್, ಡಿಸಿಪಿ ಸಾಹಿಲ್ ಬಾಗ್ಲಾ, ಪಿಡಬ್ಲ್ಯುಡಿ ಎನ್​ಎಚ್ ವಿಭಾಗದ ಅಧೀಕ್ಷಕ ಇಂಜಿನಿಯರ್ ಶಿವಾನಂದ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಸಿ. ಹುರಕಡ್ಲಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿ ಅಜೀಜ್ ದೇಸಾಯಿ, ತಹಸೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ಸಂತೋಷ ಹಿರೇಮಠ ಮತ್ತಿತರರು ಇದ್ದರು.
ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಕರೆ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಗಸ್ಟ್ 13 ರಿಂದ 15ರವರೆಗೆ ಆಯೋಜಿಸಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಬಾಡ ರಸ್ತೆ ಅಪಘಾತ ಪರಿಹಾರ ವಿತರಣೆ: ಧಾರವಾಡ ಸಮೀಪದ ಬಾಡ ಗ್ರಾಮದಲ್ಲಿ ಕಳೆದ ಮೇ 20 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವಿಗೀಡಾದವರ ಸಂಬಂಧಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ತಲಾ 5 ಲಕ್ಷ ರೂ. ಪರಿಹಾರದ ಚೆಕ್​ಗಳನ್ನು ಸಚಿವರು ಇದೇ ಸಂದರ್ಭದಲ್ಲಿ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net