

ಶಿವಮೊಗ್ಗ: ಕರೊನಾ ಪರಿಣಾಮ ಹಲವು ಕ್ಷೇತ್ರಗಳಿಗೆ ಹಿನ್ನಡೆಯಾಗಿದೆ. ಶಿಕ್ಷಣ ಕ್ಷೇತ್ರವೂ ಅದರಿಂದ ಹೊರತಾಗಿಲ್ಲ. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯಿಂದ ‘ಜ್ಞಾನ ದೀವಿಗೆ’ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಎಸ್ಎಸ್ಎಲ್ಸಿ ಮಕ್ಕಳಿಗೆ ಟ್ಯಾಬ್ ವಿತರಣೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಭಾನುವಾರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿ, ಕರೊನಾ ಕಾರಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರೂಪಿಸಿರುವ ಜ್ಞಾನ ದೀವಿಗೆ ಯೋಜನೆಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಭರವಸೆ ನೀಡಿದರು.
ಇಂಟರ್ನೆಟ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮಕ್ಕೆ ಬಂದಿದೆ. ಈ ವೇಳೆಯಲ್ಲಿ ಟ್ಯಾಬ್ ವಿತರಣೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಸಂಘ, ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಇದಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್ ಸುವರ್ಣಾ ಶಂಕರ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ರೋಟರಿ ಸಂಸ್ಥೆ ಪ್ರಮುಖರಾದ ಎಚ್.ಎಲ್.ರವಿ, ಡಾ.ಚಂದ್ರಶೇಖರ್, ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.