

ರಾಣೆಬೆನ್ನೂರ: ಕಾಂಗ್ರೆಸ್ ಪಕ್ಷ ಬಹುಮತಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಆಯ್ಕೆ ನಡೆಯುತ್ತದೆ. ಎಲ್ಲ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ಸಿಎಂ ಯಾರು ಎಂಬ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ರಾಜ್ಯದಲ್ಲಿ ಪಕ್ಷ ಬಹುಮತದಲ್ಲಿಲ್ಲ. ಮೊದಲು ಅದನ್ನು ಮಾಡುವ ಬಗ್ಗೆ ಯೋಚಿಸಬೇಕು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಆದ್ದರಿಂದ ಯಾರೇ ಆಗಲಿ ಪಕ್ಷ ವಿರೋಧಿ ಹೇಳಿಕೆ ನೀಡಬಾರದು. ನೀಡಿದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸದ್ಯ ನಡೆಯುತ್ತಿರುವ 2 ವಿಧಾನಸಭೆ ಹಾಗೂ 4 ವಿಧಾನ ಪರಿಷತ್ ಚುನಾವಣೆಗಳಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಎರಡು ಹಾಗೂ ವಿಧಾನಸಭೆ ಕ್ಷೇತ್ರದ ಎರಡು ಸೇರಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ಥಳೀಯ ನಗರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿಯವರಿಗೆ ಅವಕಾಶವಿದೆ. ಆದರೂ ಕಾಂಗ್ರೆಸ್ ಸದಸ್ಯರು ಪ್ರಯತ್ನ ನಡೆಸಿದ್ದಾರೆ. ಅವಕಾಶ ಸಿಕ್ಕರೆ, ಖಂಡಿತ ನಗರಸಭೆ ಅಧ್ಯಕ್ಷ ಸ್ಥಾನ ಪಡೆದುಕೊಳ್ಳುತ್ತೇವೆ ಎಂದರು.