ಹಣ, ಹೆಂಡ ಹಾಗೂ ಅಧಿಕಾರದ ಬಲದ ಮೇಲೆ ಚುನಾವಣೆ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದೆ: ಬಿ.ವೈ. ವಿಜಯೇಂದ್ರ

VIJAYENDRA - Copy
Published on

ಮೈಸುರು: ಬೆಂಗಳೂರು ಗ್ರಾಮಾಂತರ ಹೈಪ್ರೊಫೈಲ್ ಕ್ಷೇತ್ರವಾಗಿದ್ದು, ಹಣ, ಹೆಂಡ ಹಾಗೂ ಅಧಿಕಾರದ ಬಲದ ಮೇಲೆ ಚುನಾವಣೆ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದೆ. ಆದರೆ, ನಾವು ಅವರ ಗೊಡ್ಡು ಬೆದರಿಕೆ ಹೆದರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಬಿಜೆಪಿ ಸಜ್ಜನ ವ್ಯಕ್ತಿಯಾದ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದು, ಅವರ ಪರವಾದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

ದಿನೇ ದಿನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಗಮನಿಸಿದರೆ, ಅವರಿಗೆ ಚುನಾವಣೆ ಫಲಿತಾಂಶದ ವಾಸ್ತವಾಂಶ ತಿಳಿದಿದೆ. ಹಾಗಾಗಿಯೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಚುನಾವಣೆ ಸಂದರ್ಭ ಎಲ್ಲ ಪಕ್ಷದ ಅಭ್ಯರ್ಥಿಗಳು ಮಠಗಳಿಗೆ ತೆರಳಿ ಸ್ವಾಮೀಜಿಗಳ ಆಶೀರ್ವಾದ ಪಡೆಯುವುದು ಪದ್ಧತಿ. ಹಾಗಾಗಿ ಮೈತ್ರಿ ಅಭ್ಯರ್ಥಿಗಳು ಹೋಗಿ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಮೈಸೂರಲ್ಲಿ ಇದ್ದೇನೆ. ರಾತ್ರಿ ಕಳೆಯುವುದರೊಳಗೆ ಮ್ಯಾಜಿಕ್ ನಡೆಯುವುದಿಲ್ಲ. ಎಲ್ಲವನ್ನೂ ಕಾದುನೋಡೋಣ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿ ಶೂನ್ಯವಾಗಿದ್ದು, ಇದನ್ನು ಜನರು ಗಮನಿಸಿದ್ದಾರೆ. ಪಿಎಂ ಕಿಸಾನ್ ಯೋಜನೆಗೆ ರಾಜ್ಯದಿಂದ ನೀಡಲಾಗುತ್ತಿದ್ದ 4 ಸಾವಿರ ರೂ. ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿತು. ಜತೆಗೆ ಪ್ರತಿ ಯೂನಿಟ್ ವಿದ್ಯುತ್‌ಗೆ 4.10 ರೂ.ನಿಂದ 8.10 ರೂಪಾಯಿಗೆ ಏರಿಕೆ ಮಾಡಿದೆ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಈ ಹಿಂದೆ ಇದ್ದ 25 ಸಾವಿರ ಶುಲ್ಕವನ್ನು 3.25 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. 680 ಕೋಟಿ ರೂ. ಹಾಲಿನ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದ್ದಾರೆ. ಜತೆಗೆ ಎಸ್‌ಇಪಿ-ಟಿಎಸ್‌ಪಿ ಅನುದಾನ ಬೇರೆ ಯೋಜನೆಗೆ ಬಳಕೆ ಮಾಡಲಾಗಿದೆ. ಒಟ್ಟಾರೆ ಸರ್ಕಾರ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಬಿಜೆಪಿ ಸಕರಾತ್ಮಕ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net