

ಕೆ.ಆರ್.ಪೇಟೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಂ ಅಭಿಪ್ರಾಯಪಟ್ಟರು.
ತಾಲೂಕಿನ ಅಗ್ರಹಾರ ಬಾಚಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವವರು ಶಿಕ್ಷಕರಾಗಿದ್ದಾರೆ. ಸರ್ಕಾರ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರ, ಉಚಿತ ಮಧ್ಯಾಹ್ನ ಬಿಸಿಯೂಟ, ಶೂ, ಬೈಸಿಕಲ್ ಸೇರಿದಂತೆ ಹಲವು ಸೌಲಭ್ಯ ನೀಡುತ್ತಿದೆ. ಪಾಲಕರು ಖಾಸಗಿ ಶಾಲೆಗಳತ್ತ ವ್ಯಾಮೋಹ ಹೊಂದಿರುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳ ಮನೆ ಅಥವಾ ಕೂಸಿನ ಮನೆ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಇಂಗ್ಲಿಷ್ ಬೋಧನೆ ಮಾಡುತ್ತಿರುವ ಕಾರಣ ದಾಖಲಾತಿ ಪ್ರಮಾಣ ಹೆಚ್ಚಾಗುತ್ತಿದೆ. ಇದು ಇನ್ನೂ ಹೆಚ್ಚಾಗಬೇಕು, ಈ ನಿಟ್ಟಿನಲ್ಲಿ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ವಿದ್ಯಾರ್ಥಿಗಳು ಕಳೆದ 5ವರ್ಷಗಳ ಹಿಂದೆ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದ್ದಾರೆ. ಇದಕ್ಕೆ ಕಾರಣರಾಗಿರುವ ಹಿರಿಯ ಉನ್ನತೀಕರಣ ಸಮಿತಿ ಹಾಗೂ ಶಾಲಾಭಿವೃದ್ಧಿ ಸಮಿತಿಗೆ ಅಭಿನಂದಿಸುವುದಾಗಿ ಬಿಇಒ ಸೀತಾರಾಂ ತಿಳಿಸಿದರು.
ಸಮಾಜ ಸೇವಕರು ಹಾಗೂ ಆರ್‌ಟಿಒ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಆರ್‌ಟಿಒ ಮಲ್ಲಿಕಾರ್ಜುನ್ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಹಾಗೂ ಬೇರೆ ಕಡೆ ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಅಭಿನಂದಿಸಿದರು.
ಶಾಲೆಯ ಮಕ್ಕಳ ಪೂರ್ವ ಪ್ರಾಥಮಿಕ ಶಾಲೆಯ ಅಭವೃದ್ಧಿಗೆ 24 ಸಾವಿರ ರೂ.ಗಳನ್ನು ದೇಣಿಗೆಯಾಗಿ ನೀಡಿದರು.
ಮನ್‌ಮುಲ್ ನಿರ್ದೇಶಕರಾದ ಡಾಲು ರವಿ ಮಾತನಾಡಿದರು.ಶಾಲೆಯ ಅಭಿವೃದ್ಧಿಗೆ 20 ಸಾವಿರ ರೂ.ಗಳನ್ನು ದೇಣಿಗೆಯಾಗಿ ನೀಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಶಾಲೆಯ ಉನ್ನತೀಕರಣ ಸಮಿತಿಯ ಅಧ್ಯಕ್ಷ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಟೇಲ್ ಹನುಮಂತೇಗೌಡ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮೀಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಸಿ.ದಿವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕರನ್ನು ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನಾ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿಗಳ ಸಂಘದಿಂದ ನೆರವೇರಿಸಲಾಯಿತು.
ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಸಾರ್ವಜನಿಕರನ್ನು ರಂಜಿಸಿದವು.