ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

19 vikram 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ಕಲಘಟಗಿ, ಅಳ್ನಾವರ ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ವಾಡಿಕೆ ಮಳೆ ಆಗಿದೆ. ಹವಾಮಾನ ಇಲಾಖೆಯು ಆಗಸ್ಟ್​, ಸೆಪ್ಟೆಂಬರನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ ನೀಡಿದೆ. ಆಗ ಜನ, ಜಾನುವಾರು ಹಾನಿ ಆಗದಂತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಅಗತ್ಯ ರಕ್ಷಣಾ ಸಾಮಗ್ರಿ, ತಂಡದೊಂದಿಗೆ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ ಆಶ್ರಯದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕುರಿತು ಕೆಲಗೇರಿ ಕೆರೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಣುಕು ಪ್ರದರ್ಶನ ವೀಕ್ಷಿಸಿ ಮಾತನಾಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರವಾಹ ಪೀಡಿತ ಗ್ರಾಮಗಳಲ್ಲಿ ರಕ್ಷಣಾ ಸಾಮಗ್ರಿಗಳ ಸ್ಥಿತಿ ಪರಿಶೀಲಿಸಿ, ಸಿದ್ಧತೆ ಮಾಡಿಕೊಳ್ಳಲು ಹಾಗೂ ಪ್ರವಾಹ ಕುರಿತು ಜಾಗೃತಿ ಮೂಡಿಸಲು ಅಣುಕು ಪ್ರದರ್ಶನ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದಿಂದ ಬೆಣ್ಣೆ ಹಳ್ಳ, ತುಪ್ಪರಿ ಹಳ್ಳಗಳ ಸುತ್ತಲಿನ ಪ್ರದೇಶದ ಪ್ರಸ್ತುತ ಹಾಗೂ ಮುಂದಿನ ಒಂದು ವಾರ ಸಂಭವಿಸಬಹುದಾದ ಮಳೆ ಪ್ರಮಾಣದ ವಿವರ ಪಡೆದು ಮುನ್ನೆಚ್ಚರಿಕೆ ವಹಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟಗಳಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ 38 ಪರಿಣಿತ ಈಜುಗಾರರನ್ನು ಗುರುತಿಸಿದ್ದು, ಪ್ರವಾಹ ಸಂದರ್ಭದಲ್ಲಿ ಅವರ ಸಹಾಯ ಪಡೆಯಲಾಗುವುದು. ತಾಲೂಕಿನಲ್ಲಿ ಪ್ರವಾಹಕ್ಕೆ ಒಳಗಾಗುವ ಗ್ರಾಮದಲ್ಲಿ ಸಮಿತಿಗಳನ್ನು ರಚಿಸಿದ್ದು, ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ರೂಪಿಸಲಾಗಿದೆ ಎಂದರು.
ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಪ್ರಕಾಶ ಪವಾರ, ತಹಸೀಲ್ದಾರ ಡಾ. ಡಿ.ಎಚ್​.ಹೂಗಾರ, ಪಾಲಿಕೆ ಸದಸ್ಯೆ ಚಂದ್ರಕಲಾ ಕೊಟಬಾಗಿ, ಅಶೋಕ ಸಿಂದಗಿ, ರಾಮಕೃಷ್ಣ ಸದಲಗಿ, ಅಗ್ನಿಶಾಮಕ ಸಿಬ್ಬಂದಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು, ವಿವಿಧ ಇಲಾಖೆ ಅಧಿಕಾರಿಗಳು, ಈಜುಗಾರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net