ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಾಲಕ : ಜೀಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ

suicide
Published on

ಬೆಂಗಳೂರು: ಕಾರು ಚಾಲಕನೊಬ್ಬ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಏಕಾಏಕಿ ಜಿಗಿದು ಆತ್ಮಹತ್ಯೆ ಮಾಡಿರುವ ಘಟನೆ ರಾಜರಾಜೇಶ್ವರಿನಗರದಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಮದನ್(೨೫) ಆತ್ಮಹತ್ಯೆ ಮಾಡಿಕೊಂಡವರು. ಶನಿವಾರ ರಾತ್ರಿ ೯.೩೦ರ ಸುಮಾರಿಗೆ ರಾಜರಾಜೇಶ್ವರಿನಗರದ ಹಲಗೆವಡೇರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಮದನ್ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರ ಮೇಲೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಂತರ ಆ ಕೆಲಸ ಬಿಟ್ಟು ರಾಜರಾಜೇಶ್ವರಿನಗರದಲ್ಲಿ ವ್ಯಕ್ತಿಯೊಬ್ಬರ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲಗೆವಡೇರಹಳ್ಳಿಯ ಸ್ನೇಹಿತ ತೇಜು ಎಂಬಾತನ ರೂಮ್‌ನಲ್ಲಿ ಉಳಿದುಕೊಳ್ಳುತ್ತಿದ್ದ. ಶನಿವಾರ ರಾತ್ರಿ ರೂಮ್‌ನಲ್ಲಿ ಇದ್ದ ಮದನ್, ಏಕಾಏಕಿ ನಾಲ್ಕನೇ ಅಂತಸ್ತಿನಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮದನ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಮರಣಪತ್ರವೂ ಸದ್ಯಕ್ಕೆ ಸಿಕ್ಕಿಲ್ಲ. ಕೆಲ ದಿನಗಳಿಂದ ಮದನ್ ಮಂಕಾಗಿದ್ದ. ಜೀವನದಲ್ಲಿ ಜಿಗುಪ್ಸೆಗೊಂಡವಂತೆ ಮಾತನಾಡುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ. ಮದನ್, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸ್ನೇಹಿತರ ಜತೆ ಜಗಳವಾಡಿದ್ದರು. ಇದರಿಂದ ಬೇಸರಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಈ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net