

ವಿಜಯಪುರ : ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಸಿಬ್ಬಂದಿ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ಕೂಡ ಕಾನೂನು ಪಾಲಿಸುವ ಮೂಲಕ ಪೊಲೀಸರ ಕಾರ್ಯಕ್ಕೆ ಸಹಕರಿಸಬೇಕು. ಜಿಲ್ಲೆಯ ಪೊಲೀಸರು ಹಲವಾರು ಪ್ರಮುಖ ಪ್ರಕರಣಗಳನ್ನು ಬೇಧಿಸಿ, ಸಾರ್ವಜನಿಕರಿಗೆ ಅದರಲ್ಲೂ ರೈತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಣೆಯಿಂದ ಮೆಚ್ಚುಗೆ ಪಡೆದಿದೆ. ಸಮಾಜದಲ್ಲಿ ಸಂಘರ್ಷವಾದಾಗ ಮೊದಲಿಗೆ ನೆನಪಿಗೆ ಬರುವುದೇ ಪೊಲೀಸರು, ಜನರ ಸಂದಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ ಎಂದರು.
ದೇಶದಲ್ಲಿ ಕಳೆದ ಒಂದು ವರ್ಷದಲ್ಲಿ 264 ಜನ ಪೊಲೀಸರು ಹುತಾತ್ಮರಾಗಿದ್ದು, ನಮ್ಮ ರಾಜ್ಯದ 11 ಜನ ಪೊಲೀಸರು ಹುತಾತ್ಮರಾಗಿದ್ದಾರೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬ ಹರಿದಿನಗಳಲ್ಲಿ ಅಹಿತಕರ ಘಟನೆ ಘಟಿಸದಂತೆ ಕಾನೂನು ಮತ್ತು ಸುವ್ಯವಸ್ಥೆ ಜತೆಗೆ ಅಪರಾಧಗಳ ತಡೆಗಟ್ಟುವುದನ್ನು ಪತ್ತೆ ಹಚ್ಚುವ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ಆಸ್ತಿ-ಪಾಸ್ತಿ ಜೀವನ ರಕ್ಷಣೆಗೆ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.
2019 ಹಾಗೂ 2020ರಲ್ಲಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ನದಿಯ ನೆರೆ ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ಪೊಲೀಸ್ ಇಲಾಖೆ ತೊಡಗಿಸಿಕೊಂಡು ಜನ, ಜಾನುವಾರಗಳ ರಕ್ಷಣೆ ಹೊಣೆ ಹೊತ್ತು ಕಾರ್ಯ ನಿರ್ವಹಿಸಿ, ಇಲಾಖೆಯು ಸಾರ್ವಜನಿಕರಿಗೆ ಅಚ್ಚುಮೆಚ್ಚಿನ ಇಲಾಖೆಯಾಗಿದೆ. ಶಿಸ್ತು, ಸಮಯ ಪ್ರಜ್ಞೆ, ಪ್ರಾಮಾಣಿಕತೆ ಪೊಲೀಸ್ ಇಲಾಖೆಗೆ ಗೌರವ ಇದ್ದಂತೆ. ಪೊಲೀಸರ ತ್ಯಾಗ ಮತ್ತು ಬಲಿದಾನ ಸ್ಮರಣೀಯ ಎಂದರು.
ಪೊಲೀಸ್ ಇಲಾಖೆಯ ಶ್ರೆಯೋಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುವ ಮೂಲಕ ಪೊಲೀಸರ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಜಿಲ್ಲೆಯಲ್ಲಿ 72 ಪೊಲೀಸ್ ವಸತಿಗೃಹ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ರಾಹುಲ್ ಸಿಂಧೆ ಮಾತನಾಡಿ, ಸಮಾಜದಲ್ಲಿ ಶಾಂತಿ, ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಕಾರ್ಯ ಅನನ್ಯವಾಗಿದೆ. ಪೊಲೀಸರ ಯಶಸ್ವಿ ಕಾರ್ಯ ನಿರ್ವಹಣೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದ್ದು, ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ಮಾತನಾಡಿ, 1959ರ ಚೀನಾ ಯುದ್ಧದಲ್ಲಿ ವೀರಮರಣ ಹೊಂದಿದ ಯೋಧರ ಸ್ಮರಣಾರ್ಥ ಪ್ರತಿ ವರ್ಷ ಅ.21ರಂದು ಪೊಲೀಸ್ ಹುತಾತ್ಮರ ದಿನ ಎಂದು ಆಚರಿಸಲಾಗುತ್ತಿದೆ. ಪೊಲೀಸರು ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ರಕ್ಷಣೆ ಸಂದರ್ಭದಲ್ಲಿ ಹೋರಾಡಿ ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಅನಿತಾ ಹದ್ದಣ್ಣವರ, ಸೈನಿಕ ಶಾಲೆಯ ಪ್ರಾಂಶುಪಾಲೆ ಪ್ರತಿಭಾ ಬಿಷ್ಟ್ ಹಾಗೂ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಇದ್ದರು. ಇದೇ ವೇಳೆ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ಗೀತೆ ಹಾಗೂ ಮೌನಾಚರಣೆ ಮಾಡಲಾಯಿತು. ಪೊಲೀಸರ ಪಥಸಂಚಲನ ಎಲ್ಲರ ಗಮನ ಸೆಳೆಯಿತು.