

ಶನಿವಾರಸಂತೆ: ಪ್ರಾಥಮಿಕ ಶಾಲೆಯ ಕೊನೆಯ ಹಂತ ಏಳನೆ ತರಗತಿಯೂ ವಿದ್ಯಾರ್ಥಿ ಜೀವನದಲ್ಲಿ ಮೊದಲ ಮೆಟ್ಟಿಲಾಗುತ್ತದೆ ಎಂದು ದುಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಎಚ್.ಆರ್.ಮಲ್ಲೇಶ್ ಹೇಳಿದರು.
ಬ್ಯಾಡಗೊಟ್ಟ ಗ್ರಾ.ಪಂ.ವ್ಯಾಪ್ತಿಯ ಬೆಂಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಏಳನೆ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವು ಶಿಕ್ಷಣದ ಮೊದಲ ಮೆಟ್ಟಿಲಾಗಿರುವುದರಿಂದ ಪ್ರೌಢಶಾಲಾ ಹಂತಕ್ಕೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಯಲ್ಲಿ ಕಲಿತ ಸಂಸ್ಕಾರ, ವಿನಯತೆ ಮುಂದುವರಿಸಿಕೊಂಡು ಹೋಗಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಹಂತದಲ್ಲಿ ಕಲಿಸಿದ ಗುರುಗಳನ್ನು ಸ್ಮರಿಸಬೇಕು. ಈ ಮೂಲಕ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಡಿ.ಎಲ್.ಮೂರ್ತಿ, ಮಾನವೀಯತೆ, ಸಂಸ್ಕಾರಗಳಂತಹ ಮೌಲ್ಯಗಳನ್ನು ಮಕ್ಕಳು ಪ್ರಾಥಮಿಕ ಶಾಲಾ ಹಂತದಲ್ಲಿ ಕಲಿಯುತ್ತಾರೆ. ವಿಶೇಷವಾಗಿ ಸರ್ಕಾರಿ ಶಾಲೆಯ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಲ್ಲಿ ಗುರುಭಕ್ತಿಯನ್ನು ಕಲಿಯುತ್ತಾರೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಹಂತದ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಗುರುಭಕ್ತಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.
ಸಹ ಶಿಕ್ಷಕಿ ಬಿ.ಕೆ.ಕುಸುಮಾ, ಅತಿಥಿ ಶಿಕ್ಷಕಿ ಎಚ್.ಆರ್.ರಶ್ಮಿತಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.