ಕದಲೂರನ್ನು ಮಾದರಿ ಗ್ರಾಮವಾಗಿಸುವ ಗುರಿ

17M.D.R.1
ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನೂತನ ಸಭಾಂಗಣ ಕಟ್ಟಡವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಿದರು. ತಿಮ್ಮೇಗೌಡ, ಶಾಂತಮ್, ಸುನೀಲ್, ಲೋಕೇಶ್, ತಿಮ್ಮೇಗೌಡ, ರಾಮಲಿಂಗಯ್ಯ, ಜಗದೀಶ್ ಇದ್ದರು.
Published on

ಮದ್ದೂರು: ರಾಜ್ಯದಲ್ಲಿಯೇ ಕದಲೂರು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿಸಲು ಪಣ ತೊಟ್ಟಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ತಾಲೂಕಿನ ಕದಲೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ನೂತನ ಸಭಾಂಗಣ ಕಟ್ಟಡವನ್ನು ಉದ್ಘಾಟನೆ ಹಾಗೂ ನರೇಗಾ ಯೋಜನೆಯಡಿ ಅಡುಗೆ ಮನೆಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ನಾನು ಶಾಸಕನಾಗುವ ಮೊದಲೇ ಗ್ರಾಮದ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೆ. ಆದರೆ, ನಿಮ್ಮೆಲ್ಲರ ಆಶೀರ್ವಾದದಿಂದ ಚುನಾವಣೆಯಲ್ಲಿ ಮೊದಲ ಬಾರಿಗೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದೀರಿ. ಹೀಗಾಗಿ, ಸ್ವಗ್ರಾಮ ಕದಲೂರು ಗ್ರಾಮವನ್ನು ರಾಜ್ಯದಲ್ಲಿಯೇ ಮಾದರಿ ಗ್ರಾಮವನ್ನಾಗಿಸಲು ಎಲ್ಲ ರೀತಿಯ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಈ ಹಿಂದೆ ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಗ್ರಾಮದ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳು ಮಾತ್ರ ಸಂಚರಿಸಲು ಮಾತ್ರ ಸಾಧ್ಯವಾಗುತ್ತಿತ್ತು. ವಾಹನಗಳ ಸುಗಮ ಸಂಚಾರಕ್ಕೆ ಗ್ರಾಮದ ರಸ್ತೆಗಳನ್ನು ವಿಸ್ತರಣೆ ಮಾಡಲು ನಿಮ್ಮೆಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಇದೇ ರೀತಿ ಗ್ರಾಮದ ಬೇರೆ ರಸ್ತೆಗಳನ್ನು ಅಭಿವೃದ್ಧಿ ಮಾಡಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಕೆರೆ ತುಂಬಿಸಿ ಬಾಗಿನ ಅರ್ಪಿಸುವುದು ವಾಡಿಕೆಯಾಗಿದೆ. ಆದರೆ, ಈ ಬಾರಿ ಕೆರೆ ತುಂಬಿಸುವ ಮೊದಲು ಏತ ನೀರಾವರಿ ಯೋಜನೆಯ ಪೈಪ್ ಲೈನ್ ಸಂಪೂರ್ಣ ಶಿಥಿಲಗೊಂಡಿದೆ. ಹೀಗಾಗಿ ಅತ್ಯಾಧುನಿಕ ಮಾದರಿಯ ಪೈಪ್ ಲೈನ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಮುಕ್ತಾಯಗೊಳಿಸಿ ಕೆರೆ ತುಂಬಿಸುವ ಕಾರ್ಯವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಕದಲೂರು ಗ್ರಾಮದಿಂದ ರೈಲ್ವೆ ಟ್ರಾೃಕ್ ಮೂಲಕ ಅರಣ್ಯ ಇಲಾಖೆ ಕಚೇರಿವರೆಗೂ ರಸ್ತೆ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಕದಲೂರು ಗ್ರಾಮವನ್ನು ಮಾತ್ರ ಪರಿಗಣನೆ ಮಾಡುತ್ತಿಲ್ಲ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.

ಕದಲೂರು ಗ್ರಾಮದ ಅಭಿವೃದ್ಧಿಗೆ ಜನತೆಯ ಸಹಕಾರ ಮುಖ್ಯವಾಗಿದೆ. ಅಭಿವೃದ್ಧಿಯ ಬಗ್ಗೆ ಗ್ರಾಮಸ್ಥರು ಸಹ ಸಲಹೆ ಸೂಚನೆಗಳನ್ನು ನೀಡಬಹುದು. ಆಗ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಯೋಜನೆ ಸಿದ್ಧಪಡಿಸಲು ಸಾಧ್ಯವಾಗುತ್ತದೆ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ ಮಾತನಾಡಿ, ಕದಲೂರು ಗ್ರಾಮ ಪಂಚಾಯಿತಿಯೂ ರಾಜ್ಯದಲ್ಲಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಹೊರಹೊಮ್ಮುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದ್ದು, ಇದಕ್ಕೆ ಶಾಸಕ ಉದಯ್ ಅವರು ಅಗತ್ಯ ಸಹಕಾರ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಜನನ, ಮರಣ ಪ್ರಮಾಣ ಪತ್ರ, ಕಂದಾಯ ಇಲಾಖೆ ದಾಖಲೆಗಳು, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರ ಅನುದಾನ, ನರೇಗಾ ಹಾಗೂ ಸ್ವಂತ ಸಂಪನ್ಮೂಲದ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.

ಗ್ರಾ.ಪಂ ಅಧ್ಯಕ್ಷ ತಿಮ್ಮೇಗೌಡ, ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಸುನೀಲ್, ಲೋಕೇಶ್, ತಿಮ್ಮೇಗೌಡ, ಶಿವಣ್ಣ, ಬೋರಮ್ಮ, ಜಯಲಕ್ಷ್ಮಮ್ಮ, ರತ್ನಮ್ಮ, ಸರೋಜಮ್ಮ, ಪಾಪಣ್ಣ, ಪಿಡಿಒ ಜಗದೀಶ್, ಪಂಚಾಯತ್ ರಾಜ್ ಇಲಾಖೆ ಎಇಇ ವಿದ್ಯಾಶ್ರೀ, ತಾಲೂಕು ಯೋಜನಾಧಿಕಾರಿ ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net