ಶ್ರವಣದೋಷ ನಿವಾರಣೆಗೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ : ಮೈಸೂರು ಡಿಎಚ್‌ಒ ಡಾ.ಪಿ.ಸಿ. ಕುಮಾರಸ್ವಾಮಿ

AIISH
Published on

ಮೈಸೂರು: ಶ್ರವಣದೋಷ ನಿವಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಹೇಳಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್) ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಶ್ರವಣಶಾಸ್ತ್ರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದೇಶದಲ್ಲಿ 35 ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊ ಳಿಸಲಾಗುತ್ತಿದೆ. ರಾಷ್ಟ್ರೀಯ ಬಾಲ್ಯಸ್ವಾಸ್ಥೃ ಕಾರ್ಯಕ್ರಮದಲ್ಲಿ ಮಕ್ಕಳ ಅರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ 38 ವಿಧದ ಕಾಯಿಲೆಗಳನ್ನು ಪತ್ತೆ ಹಚ್ಚಲಾಗುತ್ತದೆ. ಇದರಲ್ಲಿ ಶ್ರವಣದೋಷ ಸಮಸ್ಯೆಯನ್ನು ಪತ್ತೆ ಹಚ್ಚುವ ಕಾರ್ಯಕ್ರಮವೂ ಒಳಗೊಂಡಿದೆ ಎಂದು ಹೇಳಿದರು.

ಮಕ್ಕಳಲ್ಲಿ ಕಾಣುವ ಶ್ರವಣ ದೋಷವನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಿದರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನವಜಾತ ಶಿಶುಗಳಲ್ಲಿ ಶ್ರವಣ ದೋಷವನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಶ್ರವಣ ದೋಷ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಶ್ರವಣ ಸಮಸ್ಯೆ ನಿವಾರಿಸುವ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೂ ಒತ್ತು ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 15 ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಲಾಗಿದೆ ಎಂದರು.

ವಾಕ್ ಮತ್ತು ಶ್ರವಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯಿಷ್ ಸಂಸ್ಥೆಯು ಕೇವಲ ದೇಶ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಹೆಗ್ಗುರುತ್ತನ್ನು ಮೂಡಿಸಿದೆ. ವೈದ್ಯರು, ಸಂಶೋಧಕರು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಯಿಷ್ ಪ್ರಭಾರ ನಿರ್ದೇಶಕ ಡಾ. ಅಜೀಶ್ ಕೆ. ಅಬ್ರಹಾಂ ಮಾತನಾಡಿ, ವಿಜ್ಞಾನವು ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿರುವ, ಆವಿಷ್ಕಾರಗೊಳ್ಳುತ್ತಿರುವ ಕ್ಷೇತ್ರವಾಗಿದ್ದು, ಆಯಿಷ್ ಕಳೆದ 25 ವರ್ಷಗಳಿಂದ ಆಡಿಯಾಲಜಿ ಹಾಗೂ ಶ್ರವಣ ವಿಜ್ಞಾನದಲ್ಲಿ ಹಲವು ಆವಿಷ್ಕಾರಗಳನ್ನು ಮಾಡಿದೆ ಎಂದರು.

ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಕೆ. ಸುರೇಶ್, ಶ್ರವಣಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎನ್. ದೇವಿ, ಅಸೋಸಿಯೇಟ್ ಪ್ರೊಫೆಸರ್ ಡಾ.ಸುಜಿತ್ ಕುಮಾರ್ ಸಿನ್ಹಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net