ಸರ್ಕಾರದಿಂದಲೇ ವೈದ್ಯಕೀಯ ಕಾಲೇಜ್ ಸ್ಥಾಪಿಸಿ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಹೋರಾಟ ಸಮಿತಿಯಿಂದ ಒತ್ತಾಯ

MEDICAL COLLEGE NIYOGA VISIT PATIL
ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು. ಬಿ.ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅರವಿಂದ ಕುಲಕರ್ಣಿ ಮತ್ತಿತರರಿದ್ದಾರೆ.
Published on

ವಿಜಯಪುರ: ಬರಪೀಡಿತ, ಅತ್ಯಂತ ಹಿಂದುಳಿದ, ಗಡಿಭಾಗದ ನಿರ್ಲಕ್ಷಿತ ಜಿಲ್ಲೆ ಎಂಬ ಹಣೆ ಪಟ್ಟಿ ಕಟ್ಟಿಕೊಂಡಿರುವ ವಿಜಯಪುರ ಜಿಲ್ಲೆಗೆ ಮಂಜೂರಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜ್‌ನ್ನು ಕೂಡಲೇ ಸ್ಥಾಪಿಸಬೇಕೆಂದು ‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಪದಾಧಿಕಾರಿಗಳು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರನ್ನು ಒತ್ತಾಯಿಸಿದರು.

ಕಲಬುರಗಿಯಲ್ಲಿರುವ ಸಚಿವರ ಬಳಿ ನಿಯೋಗ ಕೊಂಡೊಯ್ದ ಪದಾಧಿಕಾರಿಗಳು ಸಚಿವರಿಗೆ ಮನವಿ ಸಲ್ಲಿಸಿ, ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜ್ ಮಂಜೂರಿಸಬೇಕು. ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ಸ್ಥಾಪಿಸುವ ತೀರ್ಮಾನ ಕೈ ಬಿಡಬೇಕು. ಆ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಪರ, ಬಡವರ ಪರ ಎಂಬುದನ್ನು ಸಾಬೀತುಪಡಿಸಬೇಕೆಂದು ಒತ್ತಾಯಿಸಿದರು.

ಮೂಲ ಪ್ರಸ್ತಾವನೆಯಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಇರಲೇ ಇಲ್ಲ. ಇದೀಗ ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಸ್ಥಾಪಿಸುವ ಕುರಿತು ಚರ್ಚೆ ಆರಂಭಗೊಂಡಿದೆ. ಖಾಸಗಿ ಸಹಭಾಗಿತ್ವಕ್ಕೆ ನೀಡಿದರೆ ಸರ್ಕಾರಿ ವ್ಯವಸ್ಥೆಯೇ ಹಾಳಾಗಲಿದೆ. ಅಲ್ಲದೇ, ಇದರಿಂದ ಸರ್ಕಾರಿ ವ್ಯವಸ್ಥೆ ಮಹತ್ವ ಕಳೆದುಕೊಳ್ಳಲಿದೆ. ಹೀಗಾಗಿ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮೂಲಕ ಬದ್ಧತೆ ಮೆರೆಯಬೇಕೆಂದು ಒತ್ತಾಯಿಸಿದರು.

ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಆದಷ್ಟು ಬೇಗ ಚರ್ಚಿಸಿ ತೀರ್ಮಾನ ಪ್ರಕಟಿಸುವುದಾಗಿ ತಿಳಿಸಿದರೆಂದು ನಿಯೋಗದಲ್ಲಿದ್ದ ಮುಖಂಡರು ತಿಳಿಸಿದ್ದಾರೆ.

ನಿಯೋಗದಲ್ಲಿ ಬಿ.ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅರವಿಂದ ಕುಲಕರ್ಣಿ, ಎಚ್.ಟಿ. ಭರತಕುಮಾರ, ಅಲ್ಲಮ ಪ್ರಭು, ಗುರುರಾಜ ದೇಶಪಾಂಡೆ, ಮನೊಜಕುಮಾರ ಗುದ್ದಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net