ಸರ್ಕಾರ ಪಿಂಚಣಿ ಸೌಲಭ್ಯ ಅರ್ಹರು ಪಡೆಯುವಂತಾಗಬೇಕು; ಡಿಸಿ

26adarshkdga6
Published on

ಮಡಿಕೇರಿ: ಹಿರಿಯ ನಾಗರಿಕರಿಗೆ ಸರ್ಕಾರದಿಂದ ಪಿಂಚಣಿ ಸೌಲಭ್ಯ ದೊರೆಯಲಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಕಾರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಹಿರಿಯ ನಾಗರಿಕರ ಸಪ್ತಾಹ ಅಂಗವಾಗಿ ಜಾಥಾಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಸೋಮವಾರ ಚಾಲನೆ ನೀಡಿದರು.


ನಂತರ ಮಾತನಾಡಿದ ಡಾ.ಬಿ.ಸಿ.ಸತೀಶರವರು, ಹಿರಿಯ ನಾಗರಿಕರಲ್ಲಿ ಯಾರಿಗೆ ಪಿಂಚಣಿ ದೊರೆತಿಲ್ಲ. ಅಂತವರು ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಖಾತೆ ಮಾಡಿಸಿಕೊಂಡು, ಪಿಂಚಣಿಗೆ ಅರ್ಜಿ ಸಲ್ಲಿಸಬಹುದು. ಮಕ್ಕಳು ಉತ್ತಮ ಸ್ಥಿತಿಯಲ್ಲಿದ್ದು, ಪಾಲಕರನ್ನು ನೋಡಿಕೊಳ್ಳದ ಕುಟುಂಬದ ಹಿರಿಯರು ಇದ್ದಲ್ಲಿ ಅಂತಹ ಕುಟುಂಬದವರ ಬಗ್ಗೆ ಮಾಹಿತಿ ಪಡೆದು ಹಿರಿಯ ನಾಗರಿಕರ ಕಾಯ್ದೆಯಂತೆ ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಮಾತನಾಡಿ, ಹಿರಿಯ ನಾಗರಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟ ಜಾಥವು ನಗರಸಭೆವರೆಗೆ ನಡೆಯಿತು. ನಂತರ ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಸುಮಾರು ೭೫ ಕ್ಕೂ ಹೆಚ್ಚು ಹಿರಿಯ ನಾಗರಿಕರು ಜಾಥದಲ್ಲಿ ಪಾಲ್ಗೊಂಡಿದ್ದರು, ಅ೧ ರಂದು ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಾಥಾ ನಡೆಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್.ಮಂಜುನಾಥ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಮುಖರಾದ ವಿಮಲ ಹಾಗೂ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net