

ಕಳಸ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಳಸ ಬ್ಲಾಕ್ ಕಾಂಗ್ರೆಸ್‌ನಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಕಲಶೇಶ್ವರ ದೇವಸ್ಥಾನ ಸಮೀಪದಿಂದ ರಾಜ್ಯ ಪಾಲರ ವಿರುದ್ಧ ಘೋಷಣೆ ಕೂಗುತ್ತ ಸಾಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಮಾಯಿಸಿದರು. ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಮುಡಾ ಹಗರಣದ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವನ್ನು ಅಭದ್ರಗೊಳಿಸಲು ಪಿತೂರಿ ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ. ಉತ್ತರಾಖಂಡ, ಜಾಖರ್ಂಡ್, ದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಸರ್ಕಾರವನ್ನು ಅಸ್ಥಿರಗೊಳಿಸಲು ಹವಣಿಸುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿಗೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಶ್ರೇಣಿಕ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್‌ನಲ್ಲಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದು ಆರೋಪಿಸಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ವಿಶ್ವನಾಥ್ ಮಾತನಾಡಿ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿಂದೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಒತ್ತಡ ಇದೆ. ಪ್ರಜಾಸತ್ತಾತ್ಮಕವಾಗಿ ಆಡಳಿತಕ್ಕೆ ಬಂದ ಸರ್ಕಾರವನ್ನು ದುರ್ಬಲಗೊಳಿಸಲು ಸಂಚು ನಡೆಸಲಾಗಿದೆ. ನ್ಯಾಯ, ಸತ್ಯದ ಪರವಾಗಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಹೋರಾಟ ತೀವ್ರಗೊಳಿಸಲಿದೆ ಎಂದು ಹೇಳಿದರು. ನಂತರ ತಹಸೀಲ್ದಾರ್ ದಯಾನಂದ್ ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಶುಕುರು, ಕೆ.ಸಿ.ಮಹೇಶ್, ಸುಜಿತ್, ರಾಮಚಂದ್ರ ಹೆಬ್ಬಾರ್, ಸುಧಾಕರ್, ಸುರೇಶ್ ಭಟ್, ಸಂಶುದ್ದೀನ್, ಶ್ರೀನಿವಾಸ್, ಗಣೇಶ್ ಭಟ್ ಇತರರಿದ್ದರು.