

ಹನೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಚಾಮರಾಜನಗರ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನವಾಗುತ್ತಿರುವುದು ಸಂತಸದ ಸಂಗತಿ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಕಡೂರು ಆತ್ಮತೃಪ್ತಿ ಟ್ರಸ್ಟ್ ವತಿಯಿಂದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಮನದಾಳದ ಮಾತು ಕುರಿತ ಸಾಕ್ಷ್ಯಚಿತ್ರ ಚಿತ್ರೀಕರಣಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಅವರು ಹೊಂದಿರುವ ಹಸಿವು ಮುಕ್ತ ಕರ್ನಾಟಕದ ಕನಸು ಅನ್ನಭಾಗ್ಯ ಯೋಜನೆಯಿಂದ ನನಸಾಗುತ್ತಿದ್ದು, ಜಿಲ್ಲೆಯ ಜನತೆ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಶಕ್ತಿ ಯೋಜನೆಯಿಂದ ದೇಗುಲಗಳಿಗೆ ಅದರಲ್ಲೂ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡುವ ಮಹಿಳಾ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ದೇಗುಲದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಹಾಗಾಗಿ ಸಿಎಂ ಅವರು 5 ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಈ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಿದೆ. ಯೋಜನೆಗಳಿಗೆ ಈವರೆಗೂ 98 ಸಾವಿರ ರೂ. ಕೋಟಿ ವ್ಯಯಿಸಿದ್ದು, ಆರ್ಥಿಕ ಪ್ರಗತಿಗೆ ಪೂರಕವಾಗಿದೆ. ಇತರ ದೇಶ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಈ ಬಗ್ಗೆ ಫಲಾನುಭವಿಗಳ ಮಾತುಗಳನ್ನು ಸಾಕ್ಷೀಕರಿಸುವ ಉದ್ದೇಶದಿಂದ ಸಾಕ್ಷ್ಯಚಿತ್ರವನ್ನು ಚಿತ್ರೀಕರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಈ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ರಚಿಸಿರುವ ಸಮಿತಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಶಾಸಕ ಎಂ.ಆರ್. ಮಂಜುನಾಥ್ ಕ್ಷೇತ್ರದ ಅಭಿವೃದ್ಧಿಯ ಜತೆಗೆ ಈ ಯೋಜನೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಫಲಾನುಭವಿಗಳು ಈ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದು, ಕೆಲವರು ಜಮೀನಿನಲ್ಲಿ ಬೋರ್ ಕೊರೆಸಿಕೊಂಡಿದ್ದಾರೆ. ಅಂಗಡಿಯನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಹೊಲಿಗೆ ಯಂತ್ರದಿಂದ ಜೀವನ ನಡೆಸುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ಪ್ರಯೋಜನ ಮಾಡಿಕೊಳ್ಳುತ್ತಿದ್ದಾರೆ. ಚಾ.ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳಿರುವ ಹಿನ್ನಲೆಯಲ್ಲಿ ಸಾಕ್ಷ್ಯಚಿತ್ರಕ್ಕೆ ಚಾಲನೆ ನೀಡಲಾಗಿದ್ದು, ಯಶಸ್ವಿಯಾಗಲಿ ಎಂದು ಹಾರೈಸಿದರು.
ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗಡೆ, ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಚಾ.ನಗರ ಜಿಲ್ಲಾಧ್ಯಕ್ಷ ಚಂದ್ರು, ಪದಾಧಿಕಾರಿಗಳಾದ ವೆಂಕಟೇಶ್, ಕೃಷ್ಣಪ್ಪ, ತಹಸೀಲ್ದಾರ್ ಕೆ.ಎನ್ ಚೈತ್ರಾ, ಗ್ರಾಪಂ ಅಧ್ಯಕ್ಷೆ ಅರ್ಚನಾ ಹಾಗೂ ಆತ್ಮತೃಪ್ತಿ ಟ್ರಸ್ಟ್‌ನ ಪದಾಧಿಕಾರಿಗಳು ಇದ್ದರು.