ಚಿಕ್ಲಿಹೊಳೆ ವ್ಯಾಪ್ತಿಯಲ್ಲಿ ಜಂಗಲ್ ಕ್ಲಿಯರ್ ಆಗಿಲ್ಲ

24Kush02
ಕುಶಾಲನಗರ ಸಮೀಪದ ಹೊಸಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಅಧ್ಯಕ್ಷ ಸಿ.ಎಲ್.ವಿಶ್ವ.ಕುಸುಮಾ, ರಕ್ಷಿತ್ ಮಾವಾಜಿ, ಚಂದ್ರ, ಸಮೀರಾ, ಜಾಜಿ ಇದ್ದರು.
Published on

ಕುಶಾಲನಗರ: ಚಿಕ್ಲಿಹೊಳೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಜಂಗಲ್ ಕ್ಲಿಯರ್ ಕಾರ್ಯ ನಡೆದಿಲ್ಲ, ನಾಲೆಗಳಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿವೆ, ಅಣೆಕಟ್ಟೆ ನೀರು ಬದಲು ಮಳೆ ನೀರು ನಾಲೆ ಮೂಲಕ ಕೃಷಿಕರ ಜಮೀನುಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಹೊಸಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಮಂಗಳವಾರ ಅಧ್ಯಕ್ಷ ಸಿ.ಎಲ್.ವಿಶ್ವ ಅಧ್ಯಕ್ಷತೆಯಲ್ಲಿ ನಂಜರಾಯಪಟ್ಟಣ ಗ್ರಾಪಂನ 2024-25ನೇ ಸಾಲಿನ ಮೊದಲನೇ ಅವಧಿಯ ಗ್ರಾಮ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಾದ ಕಾಳಿಂಗ, ರವಿ ಅಸಮಾಧಾನ ವ್ಯಕ್ತಪಡಿಸಿದರು. ಚಿಕ್ಲಿಹೊಳೆ ನಿರ್ವಹಣೆ ಜವಾಬ್ದಾರಿ ಗ್ರಾಮ ಪಂಚಾಯಿತಿಗೆ ವಹಿಸಿ ಅನುದಾನ ಒದಗಿಸಿ ಎಂದು ಆಗ್ರಹಿಸಿದರು.
ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ನಡಾವಳಿ ಓದಿ ಅಂಗೀಕರಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಕ್ರಿಯಾಯೋಜನೆ ವಿವರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ವಿಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಇಲಾಖಾವಾರು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.


ಚಿಕ್ಲಿಹೊಳೆ ಜಲಾಶಯ ವ್ಯಾಪ್ತಿಯಲ್ಲಿ ಸ್ಥಳೀಯರ ಉದ್ಯಮಕ್ಕೆ ಅವಕಾಶ ಕಲ್ಪಿಸಬೇಕಿದೆ. ಇತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು ಇಲ್ಲಿ ಅಂಗಡಿಗಳನ್ನು ನಡೆಸುತ್ತಿರುವುದು ಖಂಡನೀಯ ಎಂದು ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಆಕ್ರೋಶ ವ್ಯಕ್ತಪಡಿಸಿದರು.
ಮೀನುಕೊಲ್ಲಿ ಅರಣ್ಯ ವ್ಯಾಪ್ತಿಯಲ್ಲಿ ಹ್ಯಾಂಗಿಂಗ್ ಸೋಲಾರ್ ಫೆನ್ಸ್‌ಗಳು ನೆಲಕಚ್ಚಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಗಮನಹರಿಸಬೇಕಿದೆ ಎಂದು ಸದಸ್ಯ ರಕ್ಷಿತ್ ಮಾವಾಜಿ ಡಿಆರ್‌ಎಫ್‌ಒ ಸುಬ್ರಾಯ ಅವರನ್ನು ಆಗ್ರಹಿಸಿದರು. ಮಳೆಯಿಂದ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ತಂತಿಗಳನ್ನು ನಿರ್ವಹಣೆ ಮಾಡುವಲ್ಲಿ ಸೆಸ್ಕ್ ವಿಳಂಬ ಧೋರಣೆ ಅನುಸರಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.


ಕಾಡಾನೆಗಳ ಹಾವಳಿಯಿಂದ ಗಿರಿಜನರ ಬೆಳೆ ನಾಶವಾದರೂ ಪರಿಹಾರ ದೊರಕುತ್ತಿಲ್ಲ. ಅರಣ್ಯ ಹಕ್ಕು ಕಾಯ್ದೆ ಅನ್ವಯ ಸೂಕ್ತ ಪರಿಹಾರ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸದಸ್ಯ ಆರ್.ಕೆ.ಚಂದ್ರ ಒತ್ತಾಯಿಸಿದರು.


ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಸಿ.ಎಲ್.ವಿಶ್ವ, ನಂಜರಾಯಪಟ್ಟಣ ಗ್ರಾಮವನ್ನು ಹೋಬಳಿ ಕೇಂದ್ರವಾಗಿಸಬೇಕಿದೆ. ದುಬಾರೆಯಲ್ಲಿ ತೂಗುಸೇತುವೆ ನಿರ್ಮಾಣ ಮಾಡಬೇಕಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಹ್ಯಾಂಗಿಂಗ್ ಫೆನ್ಸಿಂಗ್ ನಿರ್ಮಾಣ, ಕಾಯಂ ಪಶುವೈದ್ಯರ ನೇಮಕಾತಿ ಮತ್ತಿತರ ವಿಚಾರಗಳ ಬಗ್ಗೆ ಗ್ರಾಪಂ ಮೂಲಕ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ವ್ಯವಹಾರ ನಡೆಸುತ್ತಾ ಬರುತ್ತಿದೆ. ಅದರೆ ಯಾವುದು ಕೂಡ ಕಾರ್ಯರೂಪಕ್ಕೆ ಬಂದಿಲ್ಲ. 8 ಕುಟುಂಬಗಳಿಗೆ ಸ್ಲೈಂಡಿಂಗ್ ರೈಲ್ವೇ ಬ್ಯಾರಿಕೆಡ್ ಅಳವಡಿಕೆ ಕಾರ್ಯ ನಡೆದಿದೆ. ಹಾನಿಗೊಳಗಾಗಿರುವ ಸ್ಲೈಂಡಿಂಗ್ ಬ್ಯಾರಿಕೇಡ್ ದುರಸ್ತಿಗೆ ಅರಣ್ಯ ಇಲಾಖೆ ಕ್ರಮ ವಹಿಸಬೇಕಿದೆ ಎಂದು ಆಗ್ರಹಿಸಿದರು.


ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ ಸಭೆಯ ನೋಡಲ್ ಅಧಿಕಾರಿಯಾಗಿ ಪಾಲ್ಗೊಂಡಿದ್ದರು.

ಸ್ಮಶಾನ, ಪಡಿತರ ಚೀಟಿ, ಕೆರೆ ಒತ್ತುವರಿ, ಸ್ವಚ್ಛತೆ ಮತ್ತಿತರ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮಾ, ಸದಸ್ಯರಾದ ಆರ್.ಕೆ.ಚಂದ್ರ, ರಕ್ಷಿತ್ ಮಾವಾಜಿ, ಸಮೀರ, ಜಾಜಿ, ಲೋಕನಾಥ್, ಗಿರಿಜಮ್ಮ, ಪಿಡಿಒ ರಾಜಶೇಖರ್, ಕಾರ್ಯದರ್ಶಿ ಶೇಷಗಿರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net