ಕೈ ಆಡಳಿತ ವಿರುದ್ಧ ಸಿಡಿದೆದ್ದ ಕಮಲ ಪಡೆ

CTD 08 BJP 1
Published on

ಚಿತ್ರದುರ್ಗ: ರಾಜ್ಯದ ರೈತರು ತೊಂದರೆಗೆ ಸಿಲುಕಿದ್ದು, ಕೂಡಲೇ ಬರ ಘೋಷಿಸಿ ಪರಿಹಾರ ವಿತರಿಸುವ ಕಾರ್ಯ ರಾಜ್ಯ ಸರ್ಕಾರ ತ್ವರಿತವಾಗಿ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮುಖ್ಯರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಘೋಷಣೆ ಕೂಗಿದರು.

ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.

ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಟಿ.ವೆಂಕಟೇಶ್ ಯಾದವ್ ಮಾತನಾಡಿ, ಮಳೆ ಇಲ್ಲದೆ ರಾಜ್ಯದಲ್ಲಿ ಬರಗಾಲ ತಲೆದೋರಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಹೇರಲಾಗುತ್ತಿದ್ದು, 7 ಗಂಟೆ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಬಿಜೆಪಿ ಅವಧಿಯಲ್ಲಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಯೋಜನೆ, ಶ್ರಮಶಕ್ತಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ಎಲ್ಲವನ್ನೂ ಹಿಂದಕ್ಕೆ ಪಡೆಯಲಾಗಿದ್ದು, ಕೃಷಿಗಾಗಿ ಸಾಲ ಮಾಡಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೃಷಿಪರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜನವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ. ರೈತರು ನಿತ್ಯ ಒಂದಿಲ್ಲೊಂದು ತೊಂದರೆಗೆ ಸಿಲುಕುತ್ತಿದ್ದು, ಕೂಡಲೇ ಸಚಿವ ಸಂಪುಟದ ಸಭೆ ಕರೆದು ಅನ್ನದಾತರ ಸಮಸ್ಯೆಗಳ ಕುರಿತು ಚರ್ಚಿಸಿ, ನೆರವಿಗೆ ಧಾವಿಸುವ ಮೂಲಕ ಆತ್ಮಹತ್ಯೆ ತಡೆಗೆ ಮುಂದಾಗಬೇಕು ಎಂದು ಕೋರಿದರು.

ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಜಿ.ಎಸ್.ಕಲ್ಲೇಶಯ್ಯ, ಜಿಲ್ಲಾ ಉಪಾಧ್ಯಕ್ಷೆ ಶ್ಯಾಮಲಾ ಶಿವಪ್ರಕಾಶ್, ಕಾರ್ಯದರ್ಶಿ ರೇಖಾ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ನಂದಿ ನಾಗರಾಜ್, ನಗರಸಭೆ ಸದಸ್ಯ ಹರೀಶ್, ಕೆ.ಶಿವಣ್ಣಾಚಾರ್, ಶಾಂತಮ್ಮ, ರಾಮು, ವೀರೇಶ್, ಶಂಭು, ಲೋಕೇಶ್, ಕಿರಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net