ಬದಲಾಗಬೇಕಿದೆ ಶಿಕ್ಷಕರ ಮನಸ್ಥಿತಿ

26 NMG 03 (2)
ನಾಗಮಂಗಲ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದರು. ಮರಿತಿಬ್ಬೇಗೌಡ, ಚಂದ್ರಮೌಳಿ, ಸುರೇಶ್, ನಾಗೇಶ್ ಇದ್ದರು.
Published on

ನಾಗಮಂಗಲ: ಈ ಹಿಂದೆ ಶಿಕ್ಷಕರು ಅದೇ ಗ್ರಾಮದಲ್ಲಿ ವಾಸವಿದ್ದು ಸರ್ಕಾರದ ಸಮಯಕ್ಕೂ ಮೀರಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಆದರೆ ಇತ್ತೀಚಿನ ಶಿಕ್ಷಕರು ವಾಸವಿರುವುದಿರಲಿ ಮಕ್ಕಳಿಗಿಂತ ಮೊದಲೇ ಬ್ಯಾಗ್ ಹಿಡಿದು ಮನೆಕಡೆಗೆ ಹೋಗುತ್ತಿದ್ದು, ಶಿಕ್ಷಕರ ಇಂತಹ ಮನಸ್ಥಿತಿ ಬದಲಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಬುದ್ಧಿಮಟ್ಟವನ್ನು ಗ್ರಹಿಸಿ ಶೈಕ್ಷಣಿಕವಾಗಿ ಹಿಂದುಳಿದಿರುವಂತಹ ಮಕ್ಕಳನ್ನು ಗುರುತು ಮಾಡುವ ಶಕ್ತಿ ಶಿಕ್ಷಕನಿಗೆ ಇರಬೇಕು. ಆ ರೀತಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಮಾಡುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನುಂಟು ಮಾಡಿದಾಗ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತದೆ ಎಂದರು.

ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಮಕ್ಕಳು ಪಠ್ಯಕ್ಕಿಂತ ಶಿಕ್ಷಕರಿಂದ ಕಲಿಯುವುದು ಹೆಚ್ಚು. ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ ಧರ್ಮಾತೀತವಾದ ಹಾಗೂ ಜಾತಿ ರಹಿತವಾದ ಶಿಕ್ಷಣವನ್ನು ರೂಢಿಸಲು ಸಾಧ್ಯವಾಗದಿರುವುದು ವಿಷಾದನೀಯ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ತಾ.ಪಂ. ಇಒ ಚಂದ್ರಮೌಳಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ, ಬಿಇಒ ಸುರೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ್, ನಿವೃತ್ತ ಜಿಲ್ಲಾಧಿಕಾರಿ ಕೃಷ್ಣೇಗೌಡ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜೆ.ವೈ.ಮಂಜುನಾಥ್, ಮುಖಂಡರಾದ ಸುನೀಲ್ ಲಕ್ಷ್ಮೀಕಾಂತ್, ಧನಲಕ್ಷ್ಮೀ ಚಲುವರಾಯಸ್ವಾಮಿ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net