

ಹುಬ್ಬಳ್ಳಿ: ದೇಶ ಸ್ವಾತಂತ್ರ್ಯ ಪಡೆದು ಏಳು ದಶಕಗಳು ಕಳೆದರೂ ಹಿಂದುಳಿದ ವರ್ಗ ಸಮಾಜದ ಮುಖ್ಯವಾಹಿನಿಗೆ ಬಂದಿಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಳಿದ ಸಮಾಜಗಳ ಸಂಘಟನೆ ಅತಿ ಅಗತ್ಯವಾಗಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಹಿಂದುಳಿದ ಸಮಾಜದವರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಮತ್ತು ಹಿಂದುಳಿದ ಸಮಾಜಗಳು ಸಂಘಟನಾತ್ಮಕವಾಗಿ ಮುಂದೆ ಬರಬೇಕು ಎಂದು ಹೇಳಿದರು.
ಮಹಿಳೆಯರನ್ನು ಕಡ್ಡಾಯವಾಗಿ ಪಕ್ಷದ ಶಕ್ತಿ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಮಟ್ಟಗಳಲ್ಲಿ ನೇಮಕ ಮಾಡಬೇಕು. ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆ, ಸೈನಿಕ ಶಾಲೆಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಈಗಿನ ಕೇಂದ್ರ ಸರ್ಕಾರ ನೀಡಿದೆ. ರಾಜಕೀಯ ಅವಕಾಶ ಬಳಸಿಕೊಂಡು ಸಮಾಜವನ್ನು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ಆಗಬೇಕು ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಕಾರ್ಯಕರ್ತರನ್ನು ಸಂಘಟಿಸುವ ಕಾರ್ಯದಲ್ಲಿ ಪಕ್ಷದ ಎಲ್ಲ ಏಳು ಮೋರ್ಚಾಗಳು ಮೂಲ ಘಟಕದೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಇದರೊಂದಿಗೆ ಪ್ರಕೋಷ್ಠಗಳೂ ಕೆಲಸ ಮಾಡುತ್ತಿವೆ ಎಂದರು.
ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ರಾಜ್ಯ ಕಾರ್ಯದರ್ಶಿ ರವೀಂದ್ರ ದಂಡಿನ, ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಶೇಳಕೆ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಲಿಂಗರಾಜ ಪಾಟೀಲ, ಸತೀಶ ಶೇಜವಾಡಕರ, ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ, ಲಕ್ಷ್ಮೀ ಉಪ್ಪಾರ, ಪ್ರವೀಣ ಪವಾರ ಹಾಗೂ ಇತರರಿದ್ದರು.