ರಥ ಯಾತ್ರೆಗೆ ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ

ratha yathre
Published on

ಮಡಿಕೇರಿ: ಅಖಿಲ ಭಾರತ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಭಾನುವಾರ ಬರಮಾಡಿಕೊಂಡರು.

ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಿಸಿ ರಥವನ್ನು ಸ್ವಾಗತಿಸಿದರು. ಹಾಸನ ಜಿಲ್ಲೆಯ ಕಲಾತಂಡಗಳು ರಣಕಹಳೆ ಊದುವ ಮೂಲಕ ಹಾಗೂ ಚೆಟ್ಟಿಮೇಳ ವಾದ್ಯ ನುಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪೂರ್ಣಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಹಶೀಲ್ದಾರರ ಕಚೇರಿ, ತಾಲೂಕು ಪಂಚಾಯತ್ ಕಚೇರಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕು ಘಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಎಲ್ಲರೂ ತಾಯಿ ಭುವನೇಶ್ವರಿ ರಥವನ್ನು ಬರ ಮಾಡಿಕೊಂಡರು. ಬಳಿಕ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಎಲ್ಲರೂ ಸೇರಿದರು.

ಲಹರಿ ಶಿಕ್ಷಕಿಯರ ತಂಡದವರು ನಾಡಗೀತೆ ಮತ್ತು ರೈತ ಗೀತೆ ಹಾಡಿದರು. ನಂತರ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೇಶವ ಕಾಮತ್ ಅವರು ನೆರೆದಿದ್ದ ಎಲ್ಲರನ್ನು ಸ್ವಾಗತಿಸಿದರು. ಇದೇ ಡಿ.೨೦ ರಿಂದ ಮೂರು ದಿನಗಳ ಕಾಲ ಮಂಡ್ಯ ನಗರದಲ್ಲಿ ನಡೆಯಲಿರುವ ಅಖಿಲ ಭಾರತ ೮೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಕನ್ನಡ ಜ್ಯೋತಿ ರಥವನ್ನು ಕೊಡಗು ಜಿಲ್ಲೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಆ ನಿಟ್ಟಿನಲ್ಲಿ ಮಡಿಕೇರಿ ಮೂಲಕ ವಿರಾಜಪೇಟೆ-ಗೋಣಿಕೊಪ್ಪ-ಪೊನ್ನಂಪೇಟೆಗೆ ತೆರಳಲಿದೆ. ನ.೧೧ ರಂದು ಪೊನ್ನಂಪೇಟೆಯಿಂದ ಕುಶಾಲನಗರಕ್ಕೆ ತೆರಳಿ, ಕುಶಾಲನಗರದಲ್ಲಿ ೫ ಸಹಸ್ರ ಜನರಿಂದ ಕನ್ನಡ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಕಲೆಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಇರಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷೆ ನಾಡು, ನುಡಿ, ಸಂಸ್ಕೃತಿ ಸಂದೇಶ ಸಾರುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.

ಕ್ರೆಸೆಂಟ್ ಶಾಲೆ ವಿದ್ಯಾರ್ಥಿಗಳು ಹಾಗೂ ನಗರದ ಬಾಲಕರ ಬಾಲಮಂದಿರದ ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿ ಗಮನ ಸೆಳೆದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ತಾಲೂಕು ಘಟಕದ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪೌರಾಯುಕ್ತರಾದ ರಮೇಶ್, ತಾ.ಪಂ.ಇಒ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಇತರರು ಇದ್ದರು.

ರಥ ಯಾತ್ರೆಯ ವಿಶೇಷತೆ

ಕನ್ನಡ ಜ್ಯೋತಿ ರಥ ಯಾತ್ರೆಯ ವಾಹನದ ಮುಂಭಾಗದಲ್ಲಿ ಪ್ರಮುಖವಾಗಿ ತಾಯಿ ಭುವನೇಶ್ವರಿ ಮಾತೆ ಪ್ರತಿಮೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆ ಒಳಗೊಂಡಿದ್ದು ಎದ್ದುಕಂಡಿತ್ತು. ತಾಯಿ ಭುವನೇಶ್ವರಿ ಬಳಿ ತಾಯಿ ಮಾತೆ ಕಾವೇರಿ ಪ್ರತಿಮೆ ಒಳಗೊಂಡ ಕೃಷ್ಣರಾಜ ಸಾಗರ ಅಣೆಕಟ್ಟು ಬರೆದಿದ್ದು ವಿಶೇಷವಾಗಿತ್ತು. ಜ್ಯೋತಿ ಹೊತ್ತ ರಥದ ಎಡ ಮತ್ತು ಬಲ ಬದಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ ಅವರ ಒಳಗೊಂಡ ಭಾವಚಿತ್ರ ಒಳಗೊಂಡಿದ್ದು ವಿಶೇಷವಾಗಿತ್ತು. ಹಾಗೆಯೇ ಜ್ಯೋತಿ ಹೊತ್ತ ರಥದ ಹಿಂಭಾಗದಲ್ಲಿ ಎತ್ತ್ತುಗಳ ಜೊತೆ ರೈತ ಉಳುಮೆ ಮಾಡುವ ದೃಶ್ಯ ಮನಮೋಹಕವಾಗಿತ್ತು. ಜೊತೆಗೆ ಕರ್ನಾಟಕ ರಾಜ್ಯದ ಲಾಂಛನ, ಮಧ್ಯದಲ್ಲಿ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಲೋಗೋ ಒಳಗೊಂಡಿದ್ದು ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net