

ಮೈಸೂರು: ನಾವು ನಿರೀಕ್ಷೆ ಮಾಡದಂತಹ ಫಲಿತಾಂಶ ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಬಂದಿದ್ದು, ಯಾವ ಕಾರಣಕ್ಕೆ ಈ ರೀತಿಯ ಫಲಿತಾಂಶ ಬಂದಿದೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಜನರು ಸಾಮಾನ್ಯವಾಗಿ ಆಡಳಿತ ಪಕ್ಷಕ್ಕೆ ಬೆಂಬಲ ನೀಡುತ್ತಾರೆ. ಆದರೂ ಸಹ ನಾವು ಅವಲೋಕನ ಮಾಡಬೇಕಾಗುತ್ತದೆ. ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆತ್ತಿದ್ದು, ಅದೇ ರೀತಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಬಂದೇ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಚರ್ಚಿಸಲಾಗಿದೆ. ನಗರ ಪಾಲಿಕೆ ಹಾಗೂ ಸುತ್ತಮುತ್ತಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಈ ಸಮಸ್ಯೆಗಳನ್ನು ಬಗೆಹರಿಸಲು ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಅವಶ್ಯಕತೆ ಇದೆ ಎಂದು ಸಲಹೆ ನೀಡಿದ್ದೇನೆ. ನಗರಕ್ಕೆ ಮೆಟ್ರೋ ತರಲು ಸಹ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ರಚನೆಯ ಅವಶ್ಯಕತೆ ಇದೆ ಎಂದು ಹೇಳಿದರು.