

ಶನಿವಾರಸಂತೆ : ಸರ್ಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು.
ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿಯಿಂದ 27.50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ, ಉದ್ಯೋಗ ಖಾತ್ರಿ ಯೋಜನೆಯಿಂದ ನಿರ್ಮಾಣವಾಗಿರುವ ಶೌಚಗೃಹಗಳು, ಅಕ್ಷರ ದಾಸೋಹ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಬೆಳವಣಿಗೆಗಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದರೆ ಹಾಗೂ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿದರೆ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದಂತೆ ಬೆಳವಣಿಗೆಯಾಗುತ್ತದೆ. ಈ ದಿಸೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಉನ್ನತ್ತಿಗೆ ಸಹಕರಿಸುವಂತೆ ಮನವಿ ಮಾಡಿದರು. ಶಾಲೆ ಅಭಿವೃದ್ಧಿ ಜವಾಬ್ದಾರಿ ಪಾಲಕರು ಮತ್ತು ಶಿಕ್ಷಕರ ಮೇಲಿದ್ದು, ಶಾಲೆ ಕುಂದು ಕೊರತೆ ಇತರ ಚಿಕ್ಕ ಪುಟ್ಟ ಸಮಸ್ಯೆಗಳಿಗೆ ಸಬಂಧಪಟ್ಟ ಗ್ರಾಪಂ ಸಮಸ್ಯೆ ಬಗೆಹರಿಸಬೇಕು, ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ರಾಜ್ಯ ಸರ್ಕಾರ ಸದಾ ಪ್ರೋತ್ಸಾಹಿಸುತ್ತದೆ ಎಂದರು.
ಶನಿವಾರಸಂತೆ ಗ್ರಾಪಂ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆ ವಹಿಸಿದ್ದರು.
ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಗ್ರಾಪಂ ಉಪಾಧ್ಯಕ್ಷ ಸರ್ದಾರ್ ಅಹಮ್ಮದ್, ಸದಸ್ಯರಾದ ಎಸ್.ಸಿ.ಶರತ್ ಶೇಖರ್, ಎಸ್.ಎನ್.ರಘು, ಎನ್.ಎ.ಆದಿತ್ಯಗೌಡ, ಸರೋಜಾ ಶೇಖರ್, ಸರಸ್ವತಿ, ಪಿಡಿಒ ಹರೀಶ್, ಮುಖ್ಯಶಿಕ್ಷಕ ವಿಶ್ವನಾಥ್, ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ಎಸ್‌ಡಿಎಂಸಿ ಅಧ್ಯಕ್ಷ ಚರಣ್, ಸುಜಿತ್, ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮತ್ತಿತರರು ಹಾಜರಿದ್ದರು.