

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಬರಗಾಲ ನಿರ್ವಹಣೆಯಲ್ಲಿ ಕಂದಾಯ ಇಲಾಖೆ ಪಾತ್ರ ಮುಖ್ಯವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಗರದ ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿರುವ ಚಾಮುಂಡೇಶ್ವರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಈ ಹಿನ್ನೆಲೆಯಲ್ಲಿ ಬರಗಾಲದಿಂದ ಯಾವುದೇ ಸಮಸ್ಯೆಗಳು ಉಲ್ಬಣಗೊಳ್ಳುವ ಮೊದಲು ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕಂದಾಯ ಇಲಾಖೆ ಕೆಲಸದ ವಿಳಂಬದ ಬಗ್ಗೆಯೇ ಜನರು ಹೆಚ್ಚಾಗಿ ಮಾತನಾಡುತ್ತಿದ್ದು, ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹೊತ್ತು ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಹಾಗಾಗಿ, ಸಮಸ್ಯೆಗಳು ಉಲ್ಬಣಗೊಳ್ಳುವ ಮೊದಲೇ ಮುಂಜಾಗ್ರತಾ ಕ್ರಮವಹಿಸಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಾವು ಈ ವಿಷಯವಾಗಿ ಅಧಿಕಾರಿಗಳಿಗೆ ಈವರೆಗೂ ತಾಳ್ಮೆಯಿಂದಲೇ ಹೇಳುತ್ತಾ ಬಂದಿದ್ದರೂ, ಕೆಲವರು ಇದನ್ನು ಈವರೆಗೂ ಉದಾಸೀನವಾಗಿ ತೆಗೆದುಕೊಂಡಿದ್ದಾರೆ. ಅಲ್ಲದೇ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ದರ್ಬಾರ್ ನಡೆಸುವ ಸಂಸ್ಕೃತಿಯಲ್ಲಿ ನಾವಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ಗಳು ಸೇರಿದಂತೆ ಇಲಾಖೆ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.