ಸ್ವಾಸ್ಥ್ಯ ಸಮಾಜಕ್ಕೆ ವಿದ್ಯಾರ್ಥಿಗಳ ಪಾತ್ರ ಪ್ರಮುಖ

1npk...1
ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಚೇರಂಬಾಣೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಎಸ್ ಸುಬ್ಬಯ್ಯ ಉದ್ಘಾಟಿಸಿದರು
Published on

ನಾಪೋಕ್ಲು: ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸು ತುಂಬ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ ಎಂದು ಚೇರಂಬಾಣೆ ಅರುಣ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಎಸ್.ಸುಬ್ಬಯ್ಯ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನ ಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನಾಪೋಕ್ಲು ವಲಯ ಮತ್ತು ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಚೇರಂಬಾಣೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಮಾಜದ ಆಸ್ತಿ. ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು ಎಂದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್‌ನ ಶಿಬಿರಾಧಿಕಾರಿ ನಂದಕುಮಾರ್ ಮಾತನಾಡಿ, ಇದುವರೆಗೆ ರಾಜ್ಯದ 17,848 ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ನಡೆಸಿ 21ಲಕ್ಷ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಈವರೆಗೆ 1903 ಮದ್ಯವರ್ಜನ ಶಿಬಿರಗಳನ್ನು ನಡೆಸಲಾಗಿದೆ ಎಂದು ಹೇಳಿದರು.

ಮಾದಕ ವ್ಯಸನ ರೋಗ. ವಿಶ್ವ ಆರೋಗ್ಯ ಸಂಸ್ಥೆ ಸಂಶೋಧನೆ ಪ್ರಕಾರ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನ ಸೇವನೆಯಿಂದ, 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಮೃತಪಡುತ್ತಿದ್ದಾರೆ. ಸ್ನೇಹಿತರ ಒತ್ತಡ, ಜೀವನ ಶೈಲಿ, ಆರ್ಥಿಕ ಸ್ವಾತಂತ್ರ್ಯ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ ಕಾರಣಗಳಿಂದ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಹಾಗಾಗಿ ಎಚ್ಚರ ವಹಿಸಬೇಕು ಎಂದರು.

ಅರುಣ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಲೋಕೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಪೋಕ್ಲು ವಲಯದ ಮೇಲ್ವಿಚಾರಕ ಸುನಿಲ್, ಶಿಕ್ಷಕ ರಮೇಶ್, ನಾಪೋಕ್ಲು ವಲಯ ಮೇಲ್ವಿಚಾರಕ ಸುನಿಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net