ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖ

8adarshkdga2
Published on

ಮಡಿಕೇರಿ: ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಜತೆಗೆ ಎಲ್ಲರಿಗೂ ಸಮಾನ ಅವಕಾಶಗಳು ಲಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರು ಕರೆ ನೀಡಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ, ಸಂಜೀವಿನಿ (ಡೇ-ನರ್ಮ್‌), ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್) ಇವರ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕೊಡಗು ಜಿಲ್ಲೆಯಲ್ಲಿ ಮಹಿಳೆಯರ ಸರಾಸರಿ ಪ್ರಮಾಣ ಒಂದು ಸಾವಿರ ಪುರುಷರಿಗೆ ೧೦೨೬ ಮಹಿಳೆಯರು ಇದ್ದಾರೆ. ಮಹಿಳೆಯರಿಗೆ ಉದ್ಯೋಗದಲ್ಲಿ ಶೇ.೩೩ ರಷ್ಟು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಶೇ.೫೦ ರಷ್ಟು ಮೀಸಲಾತಿ ಇದ್ದು, ಇದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.


ಮಹಿಳೆಯರು ಸೇನೆ, ವಿಮಾನಯಾನ, ಕ್ರೀಡೆ, ಸಿನಿಮಾ, ಆಡಳಿತ ಹೀಗೆ ಪ್ರತೀ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದು, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸಿದ್ದಾರೆ. ಆ ನಿಟ್ಟಿನಲ್ಲಿ ಮಹಿಳೆಯರಿಗೆ ಸಹಾನುಭೂತಿ ಬೇಕಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.


ಸದ್ಯದಲ್ಲೇ ವಿಧಾನಸಭಾ ಚುನಾವಣೆ ಬರಲಿದ್ದು, ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ೧೮ ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಇದುವರೆಗೆ ಹೆಸರು ಸೇರ್ಪಡೆ ಮಾಡದಿದ್ದಲ್ಲಿ ಹೆಸರು ಸೇರಿಸಲು ಮುಂದಾಗಬೇಕು. ಜತೆಗೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.


ಜೀವ ವೈವಿದ್ಯ ಮಂಡಳಿ ರಾಜ್ಯಾಧ್ಯಕ್ಷ ನಾಪಂಡ ರವಿಕಾಳಪ್ಪ ಮಾತನಾಡಿ, ರಾಷ್ಟ್ರದಲ್ಲಿ ಮಹಿಳೆಯರಿಗೆ ಮಾತೃ ಸ್ಥಾನ ನೀಡಲಾಗಿದೆ. ಪುರುಷರ ಜತೆ ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆಯುತ್ತಿವೆ. ಭಾರತ ಸ್ವಾತಂತ್ರ್ಯಕ್ಕಾಗಿ ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವರು ಹೋರಾಡಿದ್ದಾರೆ. ಅಂತವರನ್ನು ಸದಾ ಸ್ಮರಿಸಬೇಕು ಎಂದರು.


ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಸ್ವ ಪ್ರತಿಭೆ ಮತ್ತು ಹೋರಾಟದಿಂದ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದ್ದಾರೆ. ಹಿಂದೆ ಮಹಿಳೆ ಅಬಲೆ ಎಂಬ ಮನಃಸ್ಥಿತಿ ಇತ್ತು. ಆದರೆ ಎಲ್ಲಾ ಕ್ಷೇತ್ರದಲ್ಲಿಯೂ ಮುಂದೆ ಇದ್ದಾರೆ. ಹೆಣ್ಣು ಎಷ್ಟೇ ಸಮಾನವಾಗಿ ಬದುಕಲು ಪ್ರಯತ್ನಿಸಿದರೂ ಸಹ ಶೋಷಣೆಗೆ ಒಳಗಾಗುವುದು ಅಲ್ಲಲ್ಲಿ ಕೇಳಿ ಬರುತ್ತದೆ. ಇದು ಕೊನೆಯಾಗಬೇಕು ಎಂದರು.


ಸ್ತ್ರೀಶಕ್ತಿ ಒಕ್ಕೂಟದ ರಾಜ್ಯ ಮತ್ತು ಜಿಲ್ಲಾಧ್ಯಕ್ಷ ರೆಹನಾ ಸುಲ್ತಾನ ಮಾತನಾಡಿ, ಸ್ತ್ರೀಶಕ್ತಿ ಸಂಘಗಳು ಮಹಿಳಾ ಅಭಿವೃದ್ಧಿಗೆ ಪೂರಕವಾಗಿದ್ದು, ಎಲ್ಲಾ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕು ನಡೆಸುವಂತಾಗಬೇಕು ಎಂದರು.


ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರಾದ ಭಾಗ್ಯವತಿ, ದಮಯಂತಿ, ಜಯಲಲಿತಾರವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ಯೋಜನಾ ನಿರ್ದೇಶಕ ಎಸ್.ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್.ಮಂಜುನಾಥ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಎಂ.ಉಮಾ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ವಿಮಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net