ಸಮಾಜದ ಸ್ವಾಸ್ಥೃಕ್ಕೆ ಪೊಲೀಸರ ಸೇವೆ ಅನನ್ಯ

h21-Police 3
Published on

ಹುಬ್ಬಳ್ಳಿ: ನಮ್ಮ ದೇಶ ಕಾಪಾಡಲು ಸೈನಿಕರು ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ದೇಶದೊಳಗಿನ ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ಸತತ ಸೇವೆ ಸಲ್ಲಿಸುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಷ್ಟೇ ಅಲ್ಲ, ಸಾರ್ವಜನಿಕರು ಕಾನೂನು ಪಾಲನೆ ಮಾಡುವ ಮೂಲಕ ಸಹಕಾರ ನೀಡಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ.ಆರ್. ಅಭಿಪ್ರಾಯಪಟ್ಟರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ವತಿಯಿಂದ ಇಲ್ಲಿಯ ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ನಂತರ ಅವರು ಮಾತನಾಡಿದರು.

ಪೊಲೀಸರ ಅನನ್ಯ ಸೇವೆಗೆ ನಾವು ಅಭಿನಂದನೆ ಸಲ್ಲಿಸಬೇಕು. ನಾವು ಹಬ್ಬದಲ್ಲಿ ಸಂಭ್ರಮಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದೆಂದು ಹಬ್ಬದ ಸಂಭ್ರಮ ಮರೆತು ಪೊಲೀಸ್ ಸಿಬ್ಬಂದಿ ನಮ್ಮ ಸೇವೆ ಮಾಡುತ್ತಾರೆ. ಪೊಲೀಸ್ ಇಲಾಖೆಗೆ ನಾವೆಲ್ಲರೂ ಚಿರ ಋಣಿಯಾಗಿರಬೇಕು. ಅವರ ನಿರಂತರ ಸೇವೆಗೆ ನಾವು ಅಭಾರಿಗಳಾಗಿರಬೇಕು ಎಂದರು.

ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, 1959ರ ಅಕ್ಟೋಬರ್ 21ರಂದು ಜಮ್ಮು -ಕಾಶ್ಮೀರದಲ್ಲಿ ಸಿಆರ್‌ಪಿಎಫ್ ತಂಡದ ಮೇಲೆ ಚೀನಾ ದಾಳಿ ಮಾಡಿತು. ಈ ವೇಳೆ 10 ಜನ ಸಿಆರ್‌ಎಫ್ ಯೋದರು ಮೃತಪಟ್ಟರು. 9 ಪೊಲೀಸರನ್ನು ಚೀನಾ ವಶಕ್ಕೆ ಪಡೆಯಿತು. ಈ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಹುತಾತ್ಮರನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಅ. 21 ರಂದು ಪೊಲೀಸ್ ಹುತಾತ್ಮರ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ದೇಶದಲ್ಲಿ 1-9-2024 ರಿಂದ 31-8-2025 ರವರೆಗೆ 191 ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟಿದ್ದಾರೆ. ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಿದಲ್ಲಿ ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಪೊಲೀಸರ ತ್ಯಾಗ, ಬಲಿದಾನಕ್ಕೆ ಫಲ ಸಿಗಲಿದೆ ಎಂದರು.

ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ನಮನ ಸಲ್ಲಿಸಿದರು.

ಪರೇಡ್ ಕಮಾಂಡರ್ ಆರ್‌ಪಿಐ ಸಂತೋಷ ಬೋಜಪ್ಪನವರ ನೇತೃತ್ವದ ಪೊಲೀಸ್ ಪಡೆ ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಗೌರವ ಸಲ್ಲಿಸಿತು.

ಮಾಜಿ ಸಂಸದ ಪ್ರೊ.ಐ.ಜಿ. ಸನದಿ, ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ವಿ.ಎಸ್.ವಿ. ಪ್ರಸಾದ, ಹುಡಾ ಅಧ್ಯಕ್ಷ ಶಾಕೀರ ಸನದಿ, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್. ರವೀಶ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net