ಸಾಂಕ್ರಾಮಿಕ ರೋಗಗಳ ಭೀತಿ

sankramika roga
Published on

ಮೈಸೂರು: ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಿಸುವ ಭಯ ಕಾಡುತ್ತಿದೆ.
ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಕೆೆಮ್ಮು, ಶೀತ, ನೆಗಡಿ ಮುಂತಾದ ಸೋಂಕಿನ ಕಾಯಿಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ.

ಆದರೀಗ ಮಹಾಮಾರಿ ಕರೊನಾ ವೈರಸ್ ವಿಶ್ವದೆಲ್ಲೆಡೆ ಹರಡುತ್ತಿರುವ ಹಿನ್ನೆಲೆ ಸಣ್ಣದಾಗಿ ನೆಗಡಿ ಅಥವಾ ಕೆಮ್ಮು ಕಾಣಿಸಿಕೊಂಡರೂ ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲ ಆರಂಭದ ದಿನಗಳಲ್ಲಿ ಜನರು ಕಾಯಿಲೆ ಬೀಳುವ ಸಂಭವ ಹೆಚ್ಚಿದ್ದು, ಆರೋಗ್ಯ ಇಲಾಖೆ ಎಚ್ಚರ ವಹಿಸಬೇಕಿದೆ.
ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಮಲೇರಿಯಾ, ಡೆಂೆ, ಇಲಿಜ್ವರ, ಟೈಫಾಯ್ಡ, ವೈರಾಣು ಜ್ವರ, ಕಾಲರಾ ಇನ್ನಿತರ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಎಲ್ಲ ಕಾಯಿಲೆಗಳ ಆರಂಭದಲ್ಲಿ ಜ್ವರವಷ್ಟೇ ಕಾಣಿಸಿಕೊಂಡರೂ, ಜತೆಯಲ್ಲೇ ಇತರ ನಿರ್ದಿಷ್ಟ ಗುಣಲಕ್ಷಣ ಇರುತ್ತವೆ. ಆದ್ದರಿಂದ ಮನೆಯ ಸುತ್ತಮುತ್ತ ಮಳೆ ನೀರು ನಿಲ್ಲದಂತೆ, ಸೊಳ್ಳೆಗಳ ಸಂತತಿ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಕಸದ ರಾಶಿಗಳನ್ನು ತೆರವು ಮಾಡಿಸಬೇಕು. ಸಾರ್ವಜನಿಕರು ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯಬಾರದು. ಎಲ್ಲಿಯೂ ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು.

ನೀರು ಮತ್ತು ಆಹಾರ ವ್ಯತ್ಯಾಸದಿಂದ ಈ ರೋಗಗಳು ಬರುವ ಸಾಧ್ಯತೆಗಳಿರುವುದರಿಂದ ಕುದಿಸಿ ಆರಿಸಿದ ನೀರನ್ನೇ ಸೇವಿಸಬೇಕು. ಪರಿಶುದ್ಧವಾದ ಬಿಸಿಯಾದ ಊಟ ಸೇವಿಸಬೇಕು. ತೆರೆದಿಟ್ಟ ತಿಂಡಿ-ತಿನಿಸುಗಳು ಮತ್ತು ರಸ್ತೆ ಬದಿ ಕತ್ತರಿಸಿ ಇಟ್ಟಿರುವ ಹಣ್ಣುಗಳನ್ನು ತಿನ್ನಬಾರದು. ಊಟಕ್ಕೆ ಮುಂಚೆ ಹಾಗೂ ಮಲ ವಿಸರ್ಜನೆ ನಂತರ ಕೈಗಳನ್ನು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಬೇಕು. ಬೆಚ್ಚಗಿನ ಹತ್ತಿ ಬಟ್ಟೆಗಳನ್ನು ತೊಡಬೇಕು.

ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಎಲ್ಲೂ ನೀರು ನಿಲ್ಲದಂತೆ ಎಚ್ಚರವಹಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net